ಬೆಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಹಿರಿಯ ಶಾಸಕ, ಕೊಡುಗೈ ದಾನಿ ಡಾ. ಶಾಮನೂರು ಶಿವಶಂಕರಪ್ಪ ಅವರಿಗೆ ಇದೇ 24ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ನುಡಿ ನಮನ ಸಲ್ಲಿಸಲಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ಸಭಾದ ರಾಷ್ಟ್ರೀಯ ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಬೆಂಗಳೂರಿನ ಆರ್.ಟಿ.ನಗರದಲ್ಲಿರುವ ತರಳಬಾಳು ಕೇಂದ್ರದಲ್ಲಿ ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ, ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತುಮಕೂರು ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಅವರು ಸಾನ್ನಿಧ್ಯ ವಹಿಸಲಿದ್ದಾರೆ.
ತಮ್ಮ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಭಾದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷರಾದ ಶಂಕರ ಬಿದರಿ ಅವರು ನುಡಿನಮನ ಸಲ್ಲಿಸಲಿದ್ದಾರೆ ಎಂದು ವಿವರಿಸಿದರು.
95 ವರ್ಷಗಳ ಸಾರ್ಥಕ ಜೀವನ ನಡೆಸಿದ ಶಾಮನೂರು ಶಿವಶಂಕರಪ್ಪ ಅವರು, ಶಾಸಕರಾಗಿ, ಸಂಸದರಾಗಿ, ಮಂತ್ರಿಗಳಾಗಿ ಈ ನಾಡಿಗೆ ಕೊಡುಗೆ ನೀಡಿದ್ದಾರೆ. ಸಭಾದ ರಾಷ್ಟ್ರೀಯ ಅಧ್ಯಕ್ಷರಾಗಿ ಅವರು ಸಮಾಜಕ್ಕೆ ನೀಡಿರುವ ಕೊಡುಗೆಯೂ ಅನನ್ಯವಾದ್ದು ಅವರ ನುಡಿ ನಮನ ಕಾರ್ಯಕ್ರಮಕ್ಕೆ ರಾಜ್ಯ ಮತ್ತು ನೆರೆ ರಾಜ್ಯದಿಂದಲೂ ಅಭಿಮಾನಿಗಳು, ಸಮಾಜದ ಬಾಂಧವರು ಆಗಮಿಸುತ್ತಿದ್ದಾರೆ ಎಂದೂ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಶಾಮನೂರು ಶಿವಶಂಕರಪ್ಪ ಅವರ ಅಭಿಮಾನಿಗಳು ಮತ್ತು ಸಮುದಾಯದ ಬಾಂಧವರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ








