ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಅಜ್ಜವಾರ ಗ್ರಾಮದ ನರಸಿಂಹಮೂರ್ತಿ. ನಂದೀಶ್, ಅರುಣ್, ಮನೋಜ್ ಮೃತಪಟ್ಟಿದ್ದಾರೆ.
ಕ್ರಿಸ್ಮಸ್ ಹಬ್ಬದ ಹಿನ್ನೆಲೆಯಲ್ಲಿ ಈ ನಾಲ್ವರು ಚಿಕ್ಕಬಳ್ಳಾಪುರ ನಗರದ ಚರ್ಚ್ಗಳಿಗೆ ಭೇಟಿ ನೀಡಿ ಮರಳಿ ಸ್ವಗ್ರಾಮದತ್ತ ಹೊರಟಿದ್ದರು. ಮೃತ ನಾಲ್ವರು ಯುವಕರು ಒಂದೇ ಬೈಕಿನಲ್ಲಿ ಹೊರಟಿದ್ದರು. ಈ ವೇಳೆ ಟಿಪ್ಪರ್ ಲಾರಿ ಅಡ್ಡ ಬಂದಿದ್ದು ಮುಖಾಮುಖಿ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ.








