ಧಾರವಾಡ: ಬಡ ಮತ್ತು ಮಧ್ಯಮ ವರ್ಗದವರ ಸ್ವಂತ ಮನೆಯ ಕನಸನ್ನು ನನಸಾಗಿಸುವ ಮಹತ್ವದ ಯೋಜನೆಯ ಅಂಗವಾಗಿ ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆ ಕಾರ್ಯಕ್ರಮವನ್ನು ಜನವರಿ 24, 2026 ರಂದು ಹುಬ್ಬಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿದ್ದು, ಸರ್ಕಾರದ ಜನಪರ ಕಾರ್ಯಗಳಿಗೆ ಪ್ರತೀಕವಾಗಿರುವ ಈ ಕಾರ್ಯಕ್ರಮವನ್ನು ಅತ್ಯಂತ ವ್ಯವಸ್ಥಿತವಾಗಿ ಹಾಗೂ ಯಶಸ್ವಿಯಾಗಿ ಆಯೋಜಿಸಲಾಗುತ್ತಿದೆ. ಜವಾಬ್ದಾರಿ ಹಂಚಿಕೆಯಾಗಿರುವ ಅಧಿಕಾರಿಗಳು ನಿಯಮಾನುಸಾರ ಕಾರ್ಯನಿರ್ವಹಿಸಬೇಕೆಂದು ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದ ಸಿದ್ಧತೆಯ ಕುರಿತು ಸೋಮವಾರ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಅಧಿಕಾರಿಗಳ ಪೂರ್ವಭಾವಿ ಸಭೆಯಲ್ಲಿ ಸಚಿವರು ಮಾತನಾಡಿದರು.
ಈ ಕಾರ್ಯಕ್ರಮದ ಪೂರ್ವಸಿದ್ಧತೆಗಳಲ್ಲಿ ಯಾವುದೇ ಲೋಪವಾಗದಂತೆ ಎಲ್ಲ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಹಾಗೂ ವೇದಿಕೆ ವ್ಯವಸ್ಥೆ, ಕುಡಿಯುವ ನೀರು, ವಿದ್ಯುತ್ ಸರಬರಾಜು, ಶೌಚಾಲಯ, ಸಾರಿಗೆ, ಭದ್ರತೆ ಹಾಗೂ ಆರೋಗ್ಯ ಸೇವೆಗಳ ವ್ಯವಸ್ಥೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿಗಳಿಗೆ ಅವರು ನಿರ್ದೇಶನ ನೀಡಿದರು.
ಧಾರವಾಡ ಜಿಲ್ಲೆಯಲ್ಲಿ ಒಟ್ಟು 2,169 ಮನೆಗಳು ಮಂಜೂರು ಮಾಡಲಾಗಿದೆ. ಘೋಷಿತ ಸ್ಲಂಗಳಲ್ಲಿರುವ 1,137 ಕಚ್ಚಾ ಮನೆಗಳನ್ನು ಪಕ್ಕಾ ಮನೆಗಳನ್ನಾಗಿ ಪುನರ್ ನಿರ್ಮಿಸಲಾಗಿದೆ. ಒಟ್ಟು 1,032 ಮನೆಗಳಿರುವ ವಸತಿ ಸಮುಚ್ಚಯ ನಿರ್ಮಿಸಲಾಗಿದೆ. ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹುಬ್ಬಳ್ಳಿಯಲ್ಲಿ ಮನೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಧಾರವಾಡ ಜಿಲ್ಲೆಯ 3000 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಿಸಲಾಗುವುದು ಎಂದು ತಿಳಿಸಿದರು.
ಮುಖ್ಯಮಂತ್ರಿಗಳು, ರಾಜ್ಯದ ವಸತಿ ರಹಿತರಿಗೆ ಸೂರು ಕಲ್ಪಿಸಲು ವಸತಿ ಇಲಾಖೆ ಹಾಗೂ ಕೊಳಚೆ ನಿರ್ಮೂಲನಾ ಮಂಡಳಿಗೆ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿದ್ದು, ಪ್ರತಿ ಜಿಲ್ಲೆಯಲ್ಲಿ ಹಾಗೂ ತಾಲೂಕುಗಳಲ್ಲಿ ಆದ್ಯತೆ ಮೇರೆಗೆ ವಸತಿರಹಿತರಿಗೆ ವಸತಿ ಕಲ್ಪಿಸಲು ರಾಜ್ಯ ಸರ್ಕಾರವು ಕ್ರಮವಹಿಸಿದೆ ಎಂದರು.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ನಿರ್ಮಿಸಲಾಗಿರುವ ಮನೆಗಳ ಲೋಕಾರ್ಪಣೆ ಕಾರ್ಯಕ್ರಮವು ಧಾರವಾಡ-ಹುಬ್ಬಳ್ಳಿ ಜಿಲ್ಲೆಯ ಅಭಿವೃದ್ಧಿಗೆ ಮತ್ತೊಂದು ಮೈಲಿಗಲ್ಲಾಗಲಿದೆ. ಸರ್ಕಾರವು ಬಡ ಮತ್ತು ಮಧ್ಯಮ ವರ್ಗದ ಜನರ ವಾಸಸ್ಥಾನದ ಭದ್ರತೆಗೆ ವಿಶೇಷ ಆದ್ಯತೆ ನೀಡಿದ್ದು, ಈ ಯೋಜನೆಯ ಮೂಲಕ ಸಾವಿರಾರು ಕುಟುಂಬಗಳಿಗೆ ಗೌರವಯುತ ಜೀವನದ ಅವಕಾಶ ದೊರಕಿಸಿದೆ ಎಂದು ಅವರು ಹೇಳಿದರು.
ಜನವರಿ 24, 2026 ರಂದು ಬೆಳಿಗ್ಗೆ 11 ಗಂಟೆಗೆ ಹುಬ್ಬಳ್ಳಿ ಶಹರದ ಮಂಟೂರ ರಸ್ತೆ ಪ್ರದೇಶದಲ್ಲಿ ಆಯೋಜಿಸಿರುವ ಬೃಹತ್ ವೇದಿಕೆ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಯ ವಸತಿ ರಹಿತ ಫಲಾನುಭವಿಗಳಿಗೆ ಮನೆಗಳನ್ನು ವಿತರಿಸಲಾಗುತ್ತಿದೆ. ನಾಲ್ಕು ಜಿಲ್ಲೆಗಳಿಂದ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಸುಮಾರು 42,345 ಮನೆಗಳನ್ನು ಏಕಕಾಲದಲ್ಲಿ ರಾಜ್ಯದ 28 ಜಿಲ್ಲೆಗಳಲ್ಲಿನ ವಸತಿ ರಹಿತರಿಗೆ ಸುಸಜ್ಜಿತ ಮನೆಗಳನ್ನು ವಿತರಿಸುವ ಕಾರ್ಯಕ್ರಮವು ಆಯಾ ಜಿಲ್ಲೆಯ ಸಚಿವರ ಮತ್ತು ಸ್ಥಳೀಯ ಶಾಸಕರ ನೇತೃತ್ವದಲ್ಲಿ ಜರುಗಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರತೀಯ ರಾಷ್ಟ್ರೀಯ ಕಾಂಗ್ರೇಸ್ನ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಮಾನ್ಯ ಉಪಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ ಸೇರಿದಂತೆ ರಾಜ್ಯ ಸಚಿವ ಸಂಪುಟದ ಅನೇಕ ಸಚಿವರು, ಸ್ಥಳೀಯ ಶಾಸಕರು ಭಾಗವಹಿಸಿಲಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಅವರು ತಿಳಿಸಿದರು.
ಕಾರ್ಯಕ್ರಮವು ಯಾವುದೇ ಅಡಚಣೆಗಳಿಲ್ಲದೆ, ಸುವ್ಯವಸ್ಥಿವಾಗಿ ಕ್ರಮವಹಿಸಲು ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಮನ್ವಯದಿಂದ ಕೆಲಸ ಮಾಡಬೇಕು. ಈಗಾಗಲೇ ಜವಾಬ್ದಾರಿ ಹಂಚಿಕೆಯಾಗಿರುವ ಅಧಿಕಾರಿಗಳು ಮುತುರ್ವಜಿಯಿಂದ ಕರ್ತವ್ಯ ನಿರ್ವಹಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಹೇಳಿದರು.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಮಾತನಾಡಿ, ಕರ್ನಾಟಕದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಒಟ್ಟು 1,80,253 ಮನೆಗಳು ಮಂಜೂರು ಮಾಡಲಾಗಿದೆ. ಅದರಲ್ಲಿ 1,29,986 ಮನೆಗಳ ನಿರ್ಮಾಣ ಪ್ರಾರಂಭವಾಗಿದೆ. ಇದರಲ್ಲಿ 86,651 ಮನೆಗಳ ನಿರ್ಮಾಣ ಕಾರ್ಯವು ಈಗಾಗಲೇ ಪೂರ್ಣಗೊಂಡಿದೆ. ಮೊದಲ ಹಂತದಲ್ಲಿ 36,789 ಮನೆಗಳು ಉದ್ಘಾಟನೆಯಾಗಿ, ಫಲಾನುಭವಿಗಳಿಗೆ ವಿತರಣೆ ಆಗಿವೆ. ಹಾಗೂ 43,335 ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಆವಾಸ್ ಯೋಜನೆ ಅಡಿಯಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದೊಂದಿಗೆ ಮಂಡಳಿಯು ನಿರ್ಮಿಸುತ್ತಿರುವ 1,80,253 ಮನೆಗಳಲ್ಲಿ 2ನೇ ಹಂತದಲ್ಲಿ ರಾಜ್ಯದ ಒಟ್ಟು 28 ಜಿಲ್ಲೆಯಗಳಲ್ಲಿ 42,345 ಮನೆಗಳ ಈಗ ಉದ್ಘಾಟನೆಯಾಗಲಿವೆ. ಅವುಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ 20,312 ಮನೆಗಳು, ಇತರೆ ವರ್ಗದವರಿಗೆ 22,033 ಮನೆಗಳಿವೆ. ಫಲಾನುಭವಿಗಳಿಗೆ ಯಾವುದೇ ತೊಂದರೆ ಉಂಟಾಗದಂತೆ ವಿಶೇಷ ಗಮನ ಹರಿಸಬೇಕು. ಮನೆಗಳ ಲೋಕಾರ್ಪಣೆ ಕಾರ್ಯಕ್ರಮವು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಲ್ಲ. ಬದಲಾಗಿ ಜನರ ಜೀವನದಲ್ಲಿ ಭದ್ರತೆ ಮತ್ತು ಗೌರವವನ್ನು ನೀಡುವ ಮಹತ್ವದ ಕ್ಷಣವಾಗಿದೆ ಎಂದು ಅವರು ಹೇಳಿದರು.
ವಿಧಾನ ಪರಿಷತ್ನಲ್ಲಿನ ಸರ್ಕಾರದ ಮುಖ್ಯ ಸಚೇತಕರಾದ ಸಲಿಂ ಅಹ್ಮದ್, ಶಾಸಕರು ಹಾಗೂ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಬ್ಬಯ್ಯ ಪ್ರಸಾದ್ ಶಾಸಕರಾದ ಎನ್.ಎಚ್. ಕೋನರಡ್ಡಿ ಅವರು ಮಾತನಾಡಿದರು.
ವಿಧಾನ ಪರಿಷತ್ ಸದಸ್ಯ ಎಫ್.ಹೆಚ್. ಜಕ್ಕಪ್ಪನವರ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಡಿ ಮಂಡಳಿ ಅಧ್ಯಕ್ಷೆ ಶಿವಲೀಲಾ ವಿನಯ ಕುಲಕರ್ಣಿ, ಹುಬ್ಬಳ್ಳಿ ಧಾರವಾಡ ಮಹಾನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗಾ ಎಂ., ಉಪ ಪೊಲೀಸ್ ಆಯುಕ್ತ ಮಹಾನಿಂಗ ನಂದಗಾವಿ, ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ. ರುದ್ರೇಶ ಘಾಳಿ ಅವರು ಉಪಸ್ಥಿತರಿದ್ದು, ಕಾರ್ಯಕ್ರಮದ ಸಿದ್ಧತೆಗಾಗಿ ಕೈಗೊಂಡ ಕ್ರಮಗಳ ಕುರಿತು ಮಾತನಾಡಿದರು.








