ಹುಬ್ಬಳ್ಳಿ : ಪಂಚ ಗ್ಯಾರಂಟಿ ಯೋಜನೆಗಳಿಂದ ಜನರ ಜೀವನಮಟ್ಟ ಸುಧಾರಣೆಯಾಗಿದೆ. ಪಂಚ ಗ್ಯಾರಂಟಿ ಯೋಜನೆಗಳು ಎಲ್ಲ ಕಡೆಗೆ ತಲುಪುತ್ತಿವೆ. ಜಿಲ್ಲಾ ವ್ಯಾಪ್ತಿಯಲ್ಲಿ ಸಹ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳುತ್ತಿವೆ ಎಂದು ರಾಜ್ಯಸಭೆಯ ವಿಪಕ್ಷ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಮಂಟೂರು ರಸ್ತೆಯಲ್ಲಿ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ, ಸನ್ಮಾನ್ಯ ಮುಖ್ಯಮಂತ್ರಿಯವರ ವಿಶೇಷ ಅನುದಾನದಲ್ಲಿ ಪೂರ್ಣಗೊಂಡಿರುವ ಪ್ರಧಾನಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಮಂಡಳಿ ವತಿಯಿಂದ ರಾಜ್ಯದಾದ್ಯಂತ ನಿರ್ಮಾಣಗೊಳ್ಳುತ್ತಿರುವ 1,80,253 ಮನೆಗಳ ಪೈಕಿ 2ನೇ ಹಂತದ 42,345 ಮನೆಗಳ ಲೋಕಾರ್ಪಣೆ ಹಾಗೂ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ ಮನೆ ಹಂಚಿಕೆ ಪತ್ರ – ಹಕ್ಕುಪತ್ರಗಳ ವಿತರಣಾ ಸಮಾರಂಭವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
8 ಲಕ್ಷ ಮನೆಗಳ ನಿರ್ಮಾಣ ಗುರಿಯನ್ನು ಹೊಂದಲಾಗಿದೆ. ಅದರಲ್ಲಿ ಸುಮಾರು ಎರಡುವರೆ ಲಕ್ಷ ಮನೆಗಳನ್ನು ನಿರ್ಮಿಸಿ ಹಂಚಿಕೆ ಮಾಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಾಕಷ್ಟು ಕಾರ್ಯಕ್ರಮಗಳು ಸರಕಾರದಿಂದ ನಡೆಯಲಿವೆ. ಅಪಾರ ಸಂಖ್ಯೆಯಲ್ಲಿ ಜನರು ಇದೇ ಮೊದಲ ಬಾರಿಗೆ ದೊಡ್ಡ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಮನೆಗಳನ್ನು ಅತ್ಯುತ್ತಮ ಗುಣಮಟ್ಟದಿಂದ ನಿರ್ಮಿಸಲಾಗಿದೆ. ಪ್ರಸಾದ ಅಬ್ಬಯ್ಯ ಹಾಗೂ ಜಮೀರ್ ಅಹ್ಮದ್ ಖಾನ್ ಅವರನ್ನು ಅಭಿನಂದಿಸುತ್ತೇನೆ. ಬಡವರಿಗೆ ಸೂರು ಕಲ್ಪಿಸುವ ಯೋಜನೆಗಳಿಗೆ ಇಂದಿರಾಗಾಂಧಿ ಹಾಗೂ ಡಿ.ದೇವರಾಜ ಅರಸು ಅವರ ಕಾಲದಲ್ಲೇ ಬುನಾದಿ ಹಾಕಲಾಗಿತ್ತು. ಸುಮಾರು 7.50 ಲಕ್ಷ ಬೆಲೆ ಬಾಳುವ ಮನೆಗಳನ್ನು ಕೇವಲ 1 ಲಕ್ಷಕ್ಕೆ ನೀಡಲಾಗುತ್ತಿದೆ. ಒಳ್ಳೆಯ ಬಡಾವಣೆಯನ್ನು ನಿರ್ಮಾಣ ಮಾಡಲಾಗಿದೆ. ಬಡವರ ಬಗ್ಗೆ ಕಾಳಜಿ ವಹಿಸುವವರು ಮಾತ್ರ ಇಂತಹ ಕಾರ್ಯ ಮಾಡಲು ಸಾಧ್ಯ. ರಾಜ್ಯದಾದ್ಯಂತ ಇಂತಹ ಮನೆಗಳು ನಿರ್ಮಾಣವಾಗಬೇಕು. ಜನರಿಗೆ ಅನ್ನ, ಸೂರು, ಕೆಲಸ ನೀಡುವ ಕಾರ್ಯಗಳಾಗಬೇಕು. ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯು ಬಡವರಿಗೆ ಅನುಕೂಲವಾಗಿತ್ತು. ದೇಶದ ಸ್ವಾತಂತ್ರ್ಯ ಸಂವಿಧಾನವನ್ನು ಕಾಪಾಡಬೇಕಿದೆ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಉಳಿಯಲು ಪ್ರತಿಯೊಬ್ಬರೂ ಒಂದಾಗಬೇಕು ಎಂದು ಅವರು ತಿಳಿಸಿದರು.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮನೆಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿ, ಕೊಳೆಗೇರಿ ಜನರು ಮುಖ್ಯವಾಹಿನಿಗೆ ಬರಬೇಕು. ಇದಕ್ಕಾಗಿ ಇಷ್ಟು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ ಮಾಡುತ್ತಿದ್ದೇವೆ. ನಮ್ಮ ಗ್ಯಾರಂಟಿ ಯೋಜನೆಗಳು ಇರುವುದೇ ಬಡವರನ್ನು ಮುಖ್ಯವಾಹಿನಿಗೆ ತರಲು ಸಹಾಯಕವಾಗಿವೆ. ಮೊದಲ ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಮ್ಮ ಸರ್ಕಾರ 14,58,000 ಮನೆಗಳನ್ನು ಕಟ್ಟಿ ಇತಿಹಾಸ ನಿರ್ಮಿಸಿ ವಸತಿ ಕ್ರಾಂತಿ ಮಾಡಿದ್ದೆವು. ಎರಡನೇ ಬಾರಿ ಮುಖ್ಯಮಂತ್ರಿ ಆದ ಬಳಿಕ 2024 ರಲ್ಲಿ 36,789 ಮನೆಗಳನ್ನು ಮೊದಲನೇ ಹಂತದಲ್ಲಿ ವಿತರಿಸಿದ್ದ ನಮ್ಮ ಸರ್ಕಾರ ಎರಡನೇ ಹಂತದಲ್ಲಿ 45 ಸಾವಿರ ಮನೆಗಳನ್ನು ಹಂಚುತ್ತಿದ್ದೇವೆ. ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ಬಂದ ಬಳಿಕ 5,500 ಕೋಟಿ ರೂಪಾಯಿ ಹಣವನ್ನು ಎರಡು ವರ್ಷದಲ್ಲಿ ನಮ್ಮ ಸರ್ಕಾರ ಮನೆಗಳಿಗಾಗಿ ಖರ್ಚು ಮಾಡಿದ್ದೇವೆ. ರೈತರ ಪಂಪ್ ಸೆಟ್ ಗಳಿಗೆ 2,500 ಕೋಟಿ ಸಬ್ಸಿಡಿ ಪ್ರತಿ ವರ್ಷ ಕೊಡುತ್ತಿದ್ದೇವೆ. ಇದರ ಜೊತೆಗೆ ವಿಧವಾ ವೇತನ, ವೃದ್ದಾಪ್ಯ ವೇತನ ಸೇರಿ ಪ್ರತಿಯೊಂದಕ್ಕೂ ಹೇರಳವಾಗಿ ಹಣ ಬಿಡುಗಡೆ ಮಾಡುತ್ತಲೇ ಇದ್ದೇವೆ ಎಂದರು.
ಮುಂದಿನ ತಿಂಗಳಲ್ಲಿ ಬೆಣ್ಣೆ ಹಳ್ಳ ಪ್ರವಾಹ ತಡೆಗೆ ಚಾಲನೆ ನೀಡಲಾಗುವುದು. ಸುಮಾರು 256 ಕೋಟಿ ವೆಚ್ಚದಲ್ಲಿ ಕಾಮಗಾರಿಯನ್ನು ಕೈಗೊಳ್ಳಲಾಗುವುದು. ಅಲ್ಲದೇ 36 ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಲಾಗುತ್ತದೆ. ಪಂಚ ಗ್ಯಾರಂಟಿ ಯೋಜನೆಗಳಿಂದ ತಲಾದಾಯದಲ್ಲಿ ರಾಜ್ಯವು ಇಡೀ ದೇಶದಲ್ಲೇ ಪ್ರಥಮ ಸ್ಥಾನದಲ್ಲಿದೆ. ನಮ್ಮ ಸರ್ಕಾರ ಬಡವರ ಪರ, ಹಿಂದುಳಿದವರ ಪರ, ಮಹಿಳೆಯರ ಪರವಾಗಿದೆ. ಈ ಹಿಂದೆ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಲಾಗಿತ್ತು. ಪ್ರಸ್ತುತ 592 ಭರವಸೆಗಳಲ್ಲಿ 243 ಭರವಸೆಗಳನ್ನು ಈಗಾಗಲೇ ಈಡೇರಿಸಲಾಗಿದೆ. ಅಸಮಾನತೆ ತೊಲಗಿಸಿ ಸಮ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎಂದು ಅವರು ತಿಳಿಸಿದರು.
ವಸತಿ ಸಚಿವರಾದ ಜಮೀರ್ ಅಹ್ಮದ್ ಖಾನ್ ಮಾತನಾಡಿ, 1.80 ಸಾವಿರ ಮನೆಗಳಲ್ಲಿ ಮೊದಲ ಹಂತದಲ್ಲಿ 36,000ಕ್ಕೂ ಅಧಿಕ ಮನೆಗಳನ್ನು ವಿತರಣೆ ಮಾಡಲಾಗಿದೆ. ಎರಡನೇ ಹಂತದಲ್ಲಿ 42,345 ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಅಲ್ಲದೆ 20,395 ಹಕ್ಕು ಪತ್ರಗಳನ್ನು ವಿತರಿಸಲಾಗುತ್ತಿದೆ. ರಾಜೀವ್ ಗಾಂಧಿ ಅವಾಸ್ ಯೋಜನೆಯಡಿ ಮನೆಗಳನ್ನು ಪೂರ್ಣಗೊಳಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಅವುಗಳನ್ನು ಸಹ ಪೂರ್ಣಗೊಳಿಸಲಾಗುವುದು. ಭಾವೈಕ್ಯತೆ ಸಾರುವ ಸರ್ಕಾರ ನಮ್ಮದಾಗಿದೆ ಎಂದರು.
ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಲಾಡ್ ಮಾತನಾಡಿ, ಇಂದು 42,000ಕ್ಕೂ ಅಧಿಕ ಮನೆಗಳನ್ನು ಲೋಕಾರ್ಪಣೆಗೊಳಿಸಲಾಗುತ್ತಿದೆ. ಹುಬ್ಬಳ್ಳಿಯಲ್ಲಿ 2000ಕ್ಕೂ ಅಧಿಕ ಮನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ವಾರ್ಷಿಕವಾಗಿ 60 ಸಾವಿರ ಕೋಟಿ ಹಣವನ್ನು ಖರ್ಚು ಮಾಡಲಾಗುತ್ತದೆ. ಐದು ವರ್ಷಕ್ಕೆ ಸುಮಾರು 3 ಲಕ್ಷ ಕೋಟಿ ಹಣವನ್ನು ಜನರಿಗೆ ನೇರವಾಗಿ ತಲುಪಿಸಲಾಗುತ್ತಿದೆ. ಶಕ್ತಿ ಯೋಜನೆ ಅಡಿ 600 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಿದ್ದಾರೆ. ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗುತ್ತಿವೆ ಎಂದರು.
ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಪ್ರಸಾದ ಅಬ್ಬಯ್ಯ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಕಾರ್ಯಕ್ರಮ ಇತಿಹಾಸ ಸೃಷ್ಟಿ ಮಾಡಿದೆ. ಬಡವರ ಬಗ್ಗೆ ವಿಶೇಷ ಕಾಳಜಿ ಹೊಂದಿದ ಸರ್ಕಾರ ನಮ್ಮದಾಗಿದೆ. 2017ರಲ್ಲಿ ಮಂಜೂರಾದ ಮನೆಗಳನ್ನು ಸಹ ನಿರ್ಮಾಣ ಮಾಡಿ ಪೂರ್ಣಗೊಳಿಸಲಾಗಿದೆ. ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷನಾಗಿದ್ದಕ್ಕೂ ಸಾರ್ಥಕವಾಗಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಫಲಾನುಭವಿಗಳಿಗೆ ಮನೆಗಳನ್ನು ಹಂಚಿಕೆ ಮಾಡಲಾಯಿತು. ಹಕ್ಕುಪತ್ರಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ, ಕಾನೂನು ಸಚಿವರಾದ ಹೆಚ್.ಕೆ.ಪಾಟೀಲ್, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಕೆ.ಎಚ್ ಮುನಿಯಪ್ಪ, ಪರಿಷತ್ ಸದಸ್ಯರಾದ ಬಿ.ಕೆ.ಹರಿಪ್ರಸಾದ್, ಸಲೀಂ ಅಹ್ಮದ್ ಸೇರಿದಂತೆ ಶಾಸಕರು, ಜನಪ್ರತಿನಿಧಿಗಳು, ಆಯೋಗ, ನಿಗಮ, ಮಂಡಳಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಮಹಾನಗರ ಪಾಲಿಕೆ, ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರು, ಗದಗ, ಹಾವೇರಿ, ಧಾರವಾಡ ಜಿಲ್ಲೆಯ ಗ್ರಾಮೀಣ ಭಾಗದ ಫಲಾನುಭವಿಗಳು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಸಾರ್ವಜನಿಕರು ಇತರರು ಭಾಗವಹಿಸಿದ್ದರು.
ಪ್ರಭಾರ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಸ್ವಾಗತಿಸಿದರು. ನಾಗಚಂದ್ರಿಕಾ ಮತ್ತು ತಂಡದವರು ಭಾವಗೀತೆಗಳನ್ನು ಹಾಡಿ ರಂಜಿಸಿದರು. ಶಿಲ್ಪಾ ರಾಜನ್ ನಿರೂಪಿಸಿದರು








