ಬಳ್ಳಾರಿ : ಸಾಮಾಜಿಕ ಜಾಲತಾಣ ಹಾಗೂ ಮೊಬೈಲ್ ವ್ಯಸನದಿಂದ ಮಕ್ಕಳ ಭವಿಷ್ಯಕ್ಕೆ ದೊಡ್ಡ ಕಂಟಕವಾಗಿ ಪರಿಣಮಿಸಿವೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೋಸಂಬೆ ಅವರು ಹೇಳಿದರು.
ಶನಿವಾರ ನಗರದ ಜಿಲ್ಲಾ ಪಂಚಾಯಿತಿಯ ಹಳೆಯ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳು, ಪೋಷಕರು ಹಾಗೂ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಸದಸ್ಯರ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಆಯ್ದ 5 ಜಿಲ್ಲೆಗಳಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ ಶೇ.42ರಷ್ಟು ಮಕ್ಕಳು ಸಾಮಾಜಿಕ ಜಾಲತಾಣಗಳ ಬಳಕೆಯಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.
ಮಕ್ಕಳು ದಿನಕ್ಕೆ 6ರಿಂದ 7 ಗಂಟೆಗಳ ಕಾಲ ಮೊಬೈಲ್‌ನಲ್ಲಿ ಕಳೆಯುತ್ತಿರುವುದು ಅವರ ಮೆದುಳಿನ ಬೆಳವಣಿಗೆಯ ಮೇಲೆ ದುಷ್ಪರಿಣಾಮ ಬೀರಲಿದೆ. ಪೋಷಕರು ಮಕ್ಕಳೊಂದಿಗೆ ಆಪ್ತವಾಗಿ ಕಾಲ ಕಳೆಯುವ ಮೂಲಕ ಅವರನ್ನು ಈ ವ್ಯಸನದಿಂದ ದೂರವಿಡಬಹುದು ಎಂದು ಕಿವಿಮಾತು ಹೇಳಿದರು.
1989ರ ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಗೆ ಭಾರತ ಸಹಿ ಹಾಕಿ ಮೂರು ದಶಕಗಳೇ ಕಳೆದರೂ, ಮಕ್ಕಳ ಸುರಕ್ಷತೆ ಇಂದಿಗೂ ಸವಾಲಾಗಿದೆ. ದೇಶದ ಶೇ.41ರಷ್ಟು ಹಾಗೂ ರಾಜ್ಯದ ಸುಮಾರು 2.5 ಕೋಟಿ ಮಕ್ಕಳ ರಕ್ಷಣೆಯ ಬಗ್ಗೆ ನಮ್ಮೆದುರು ಪ್ರಶ್ನೆಗಳಿವೆ. ಇತ್ತೀಚೆಗೆ ಶಾಲೆಗಳಲ್ಲಿ ಸಂಭವಿಸುತ್ತಿರುವ ವಿದ್ಯುತ್ ಸ್ಪರ್ಶದಂತಹ ದುರಂತಗಳು ಮತ್ತು ವಾಹನ ಅಪಘಾತಗಳು ಅಧಿಕಾರಿಗಳ ಬೇಜವಾಬ್ದಾರಿಗೆ ಸಾಕ್ಷಿಯಾಗಿವೆ. ಮಗು 18 ವರ್ಷ ತುಂಬುವವರೆಗೆ ಘನತೆಯಿಂದ ಬದುಕುವ ವಾತಾವರಣ ನಿರ್ಮಿಸುವುದು ಎಲ್ಲರ ಹೊಣೆಯಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಮಕೃಷ್ಣ ನಾಯಕ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಸುಭದ್ರಾದೇವಿ, ಡಿಡಿಪಿಐ ಬಿ.ಉಮಾದೇವಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ತ್ರಿವೇಣಿ ಪತ್ತಾರ್, ಸದಸ್ಯೆ ಗೌಸಿಯಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ವಿವಿಧ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.








