ಬಳ್ಳಾರಿ : ಪೋಕ್ಸೋ ಘಟನೆ ನಡೆದ ಸಂದರ್ಭದಲ್ಲಿ ಪ್ರಕರಣ ದಾಖಲಿಸುವುದು ಕಡ್ಡಾಯವಾಗಿದ್ದು, ವಿಳಂಬ ತೋರಿದಲ್ಲಿ ಸಂಬಂಧಿಸಿದವರ ಮೇಲೆ ಕ್ರಮ ಜರುಗಿಸಲು ಕಾನೂನಿನಡಿ ಅವಕಾಶವಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಶಶಿಧರ್ ಕೊಸಂಬೆ ಅವರು ತಿಳಿಸಿದರು.
ನಗರದ ಜಿಲ್ಲಾ ಪಂಚಾಯತ್ ನ ಹಳೆಯ ನಜೀರ್ ಸಾಬ್ ಸಭಾಂಗಣದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಶನಿವಾರ ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಬಗ್ಗೆ ಮಾಹಿತಿ ತಿಳಿದಿರುವ ಯಾರೇ ವ್ಯಕ್ತಿ, ಪೋಷಕರು ಅಥವಾ ಶಾಲಾ ಸಿಬ್ಬಂದಿ ಕೂಡಲೇ ಪೊಲೀಸ್ ಠಾಣೆ ಅಥವಾ ಮಕ್ಕಳ ರಕ್ಷಣಾ ಘಟಕಕ್ಕೆ ವರದಿ ಮಾಡುವುದು ಕಡ್ಡಾಯವಾಗಿದೆ ಎಂದರು.
ಮಕ್ಕಳ ರಕ್ಷಣಾ ನೀತಿ 2016 ಕಾಯ್ದೆ ಅನುಷ್ಠಾನಗೊಳಿಸಿ:
ಜಿಲ್ಲೆಯ ಎಲ್ಲಾ ಶಾಲೆಗಳು, ವಸತಿ ನಿಲಯಗಳ ಮಕ್ಕಳಿಗೆ ಯಾವುದೇ ರೀತಿಯ ಹಿಂಸೆ, ದೌರ್ಜನ್ಯ, ಶೋಷಣೆಯಿಂದ ರಕ್ಷಣೆ ಒದಗಿಸುವ ಮೂಲಕ ಸುರಕ್ಷಿತ ವಾತಾವರಣ ಕಲ್ಪಿಸಬೇಕು. ಪ್ರತಿಯೊಂದು ಶಾಲೆ ಮತ್ತು ವಸತಿ ನಿಲಯಗಳಲ್ಲಿ ಮಕ್ಕಳ ಹಕ್ಕುಗಳ ಸುರಕ್ಷಾ ಸಮಿತಿ ರಚಿಸಬೇಕು. ದೂರು ಪೆಟ್ಟಿಗೆಗಳನ್ನು ಅಳವಡಿಸಬೇಕು. ಅವುಗಳನ್ನು ನಿಯಮಿತವಾಗಿ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕು.
ದೌರ್ಜನ್ಯಕ್ಕೊಳಗಾದ ಮಕ್ಕಳ ವೈಯಕ್ತಿಕ ಮಾಹಿತಿ ಮತ್ತು ಅವರ ಕುರಿತಾದ ದೂರುಗಳನ್ನು ಗೌಪ್ಯವಾಗಿ ಇಡಬೇಕು. ಮಕ್ಕಳ ಕಳ್ಳಸಾಗಣೆ, ಬಾಲಕಾರ್ಮಿಕ ಪದ್ಧತಿ, ಬಾಲ ವಿವಾಹದ ವಿರುದ್ಧ ಜಾಗೃತಿ ಮೂಡಿಸುವುದು. ಲೈಂಗಿಕ ದೌರ್ಜನ್ಯದಿಂದ ಮಕ್ಕಳ ರಕ್ಷಣೆ ಕಾಯ್ದೆ 2012 ರಡಿ ಕ್ರಮ ಅನುಷ್ಠಾನಗೊಳಿಸುವುದು ಒಳಗೊಂಡ ಮಕ್ಕಳ ರಕ್ಷಣಾ ನೀತಿ 2016 ಕಾಯ್ದೆಯನ್ನು ತಪ್ಪದೇ ಅನುಷ್ಠಾನಗೊಳಿಸಬೇಕು ಎಂದು ಸಂಬAಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಹಲವೆಡೆ ಮಕ್ಕಳು ಕಾಣೆಯಾದ ಪ್ರಕರಣಗಳು ದಾಖಲಾಗಿದ್ದು, ಹಲವು ಪ್ರಕರಣಗಳಲ್ಲಿ ಪತ್ತೆ ಮಾಡಲು ಸಾಧ್ಯವಾಗಿಲ್ಲ. ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುವ ಮೂಲಕ ಇತ್ಯರ್ಥಪಡಿಸಲು ಕ್ರಮವಹಿಸಬೇಕು. ಕಾಣೆಯಾದ, ಪತ್ತೆಯಾಗದ ಮಕ್ಕಳ ಪಟ್ಟಿ ಸಿದ್ಧಪಡಿಸಿಕೊಂಡು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು. ವರದಿ ನೀಡಬೇಕು ಎಂದರು.
ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ನಿಷೇಧ ಕಾನೂನು ಪರಿಣಾಮಕಾರಿ ಅನುಷ್ಠಾನಗೊಳಿಸಿ:
ಪ್ರಸವಪೂರ್ವ ಭ್ರೂಣಲಿಂಗ ಪತ್ತೆ ಎಂಬ ಸಾಮಾಜಿಕ ಪಿಡುಗನ್ನು ನಿರ್ಮೂಲನೆ ಮಾಡಲು ಕಾನೂನಿನ ಮಾದರಿ ಹಾಗೂ ಶಾಸನ ಬದ್ಧ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಹೇಳಿದರು.
ಸಮಾಜದಲ್ಲಿ ಲಿಂಗಾನುಪಾತದ ಅಸಮತೋಲನವು ಗಂಭೀರ ಸಾಮಾಜಿಕ ಸಮಸ್ಯೆಯಾಗಿದ್ದು, ಇದರ ಮೂಲ ಕಾರಣಗಳಲ್ಲಿ ಪ್ರಮುಖವಾದದ್ದು ಭ್ರೂಣ ಲಿಂಗ ಪತ್ತೆ ಹಾಗೂ ಹೆಣ್ಣು ಭ್ರೂಣ ಹತ್ಯೆಆಗಿದೆ. ಈ ಸಾಮಾಜಿಕ ಪಿಡುಗನ್ನು ತಡೆಯುವ ಉದ್ದೇಶದಿಂದ ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ, ತಂತ್ರ ವಿಧಾನಗಳ ನಿಷೇದ ಕಾಯ್ದೆ ಜಾರಿಗೆ ತಂದಿದ್ದು, 2003ರಲ್ಲಿ ಕಾಯ್ದೆಯನ್ನು ಇನ್ನಷ್ಟು ಬಲಪಡಿಸಲಾಗಿದೆ. ಹಾಗೂ ಭ್ರೂಣಲಿಂಗ ಪತ್ತೆಯನ್ನು ಸಂಪೂರ್ಣವಾಗಿ ನಿಷೇಧಿಸುವುದರ ಜೊತೆಗೆ ಹೆಣ್ಣು ಮಕ್ಕಳ ಜನನವನ್ನು ಉತ್ತೇಜಿಸುವುದು, ಲಿಂಗಾನುಪಾತವನ್ನು ಸಮತೋಲನದಲ್ಲಿರಿಸುವುದು ಹಾಗೂ ಮಹಿಳೆಯರ ಗೌರವ ಮತ್ತು ಹಕ್ಕುಗಳನ್ನು ರಕ್ಷಿಸುವುದೇ ಈ ಕಾಯ್ದೆಯ ಉದ್ದೇಶವಾಗಿದೆ ಎಂದರು.
ಜಿಲ್ಲೆಯಲ್ಲಿ ಬಾಲ್ಯವಿವಾಹ ಪದ್ಧತಿಯನ್ನು ಬೇರು ಸಮೇತ ಕಿತ್ತು ಹಾಕಲು ವಿವಿಧ ಇಲಾಖೆಗಳ ಸಹಕಾರ ಅಗತ್ಯವಾಗಿದ್ದು, ಎಲ್ಲರೂ ಕೈಜೋಡಿಸಬೇಕು ಎಂದು ತಿಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.








