ಕಲಬುರಗಿ : ವ್ಯಕ್ತಿಯೋರ್ವನನ್ನು ಚಾಕುವಿನಿಂದ ಇರಿದು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶುಕ್ರವಾರ ಸಂಜೆ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ ನಡೆದಿದೆ. ಮೃತರನ್ನು ಗಾಜಿಪುರ ಬಡಾವಣೆಯ ನಿವಾಸಿ ಶರಣಬಸಪ್ಪ ಗೌಳಿ (35) ಎಂದು ಗುರುತಿಸಲಾಗಿದೆ.
ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಶರಣು ಗೌಳಿ ಅವರು ಶುಕ್ರವಾರ ಸಂಜೆ ಸುಮಾರು 6 ಗಂಟೆ ವೇಳೆಗೆ ಸೂಪರ್ ಮಾರ್ಕೆಟ್‌ನ ನರ್ತಕಿ ಬಾರ್ ಪಾರ್ಕಿಂಗ್ ಪ್ರದೇಶದಲ್ಲಿ ನಿಂತಿದ್ದಾಗ, ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕೊಲೆಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ., ಎಸಿಪಿ ಶಿವನಗೌಡ ಪಾಟೀಲ ಹಾಗೂ ಬ್ರಹ್ಮಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.








