ಬೆಂಗಳೂರು : ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೋಧಕ, ಬೋಧಕೇತರರಿಗೆ ಡಿಜಿಟಲ್ ಹಾಜರಾತಿ ಕಡ್ಡಾಯಗೊಳಿಸಿದ್ದು, ಇದೀಗ ರಾಜ್ಯ ಸರ್ಕಾರ ಮುಂದಿನ ಶೈಕ್ಷಣಿಕ ಸಾಲಿನಿಂದ ವಿದ್ಯಾರ್ಥಿಗಳಿಗೆ ಡಿಜಿಟಲ್ ಹಾಜರಾತಿ ಅನುಷ್ಠಾನಕ್ಕೆ ತರಲು ಸಿದ್ಧತೆ ನಡೆಸಿದೆ.
ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್‌ಮೆಂಟ್ ಸಿಸ್ಟಮ್ (ಕರ್ತವ್ಯ) ಮೊಬೈಲ್ ಅಪ್ಲಿಕೇಶನ್‌ನಲ್ಲಿ ಕೃತಕ ಬುದ್ಧಿಮತ್ತೆ, ಭೌಗೋಳಿಕ ಮಾಹಿತಿ ವ್ಯವಸ್ಥೆ ಮೂಲಕ ಜಿಯೋ ಫೆನ್ಸಿಂಗ್ ಮಾಡಿ ಮುಖಚಹರೆಯಲ್ಲಿ ಹಾಜರಾತಿ ದಾಖಲಿಸಿಕೊಳ್ಳಲಾಗುತ್ತದೆ. ಶಿಕ್ಷಕರು, ಸಿಬ್ಬಂದಿ ತಮ್ಮ ಕರ್ತವ್ಯ ಸ್ಥಳದಲ್ಲಿ ಪ್ರತಿದಿನ 2 ಬಾರಿ (ಇನ್ ಟೈಮ್, ಔಟ್ ಟೈಮ್) ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿರಲಿದೆ ಎಂದು ಆದೇಶದಲ್ಲಿ ತಿಳಿಸಿದೆ.
ಶಾಲಾ ಶಿಕ್ಷಣ ಇಲಾಖೆಯಲ್ಲಿ ಖಾಯಂಮಾತಿಯಾಗಿರುವ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಯ ಶಿಕ್ಷಕರು, ಪಿಯು ಉಪನ್ಯಾಸಕರು, ಮುಖ್ಯ ಶಿಕ್ಷಕರು, ಪ್ರಾಂಶುಪಾಲರು, ಸಿಬ್ಬಂದಿ, ಇಲಾಖೆಯ ಕಚೇರಿಗಳಲ್ಲಿನ ಬೋಧಕೇತರ ಸಿಬ್ಬಂದಿ ಮತ್ತು ಅಧಿಕಾರಿಗಳು ತಮ್ಮ ಹಾಜರಾತಿಯನ್ನು ಮೊಬೈಲ್ ಅಪ್ಲಿಕೇಷನ್ನಲ್ಲಿ ಹಾಕಬೇಕಿದೆ.
ಕರ್ತವ್ಯ ಸ್ಥಳದಲ್ಲಿ ಪ್ರತಿದಿನ ಹಾಗೂ ತರಬೇತಿ ಸಮಯದಲ್ಲಿ ತರಬೇತಿ ಕೇಂದ್ರದಲ್ಲಿ, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸುವ ಪರೀಕ್ಷೆಯ ಮೌಲ್ಯಮಾಪನ ಸಮಯಯಲ್ಲಿ ಮೌಲ್ಯಮಾಪನ ಕೇಂದ್ರದಲ್ಲಿ ಕಡ್ಡಾಯವಾಗಿ ಡಿಜಿಟಲ್ ಸ್ವರೂಪದಲ್ಲಿ ಹಾಜರಾತಿ ದಾಖಲಿಸಬೇಕು ಎಂದು ಇಲಾಖೆ ಆದೇಶಿಸಿದೆ.








