ಬೆಳಗಾವಿ : ಬೆಳಗಾವಿಯಲ್ಲಿ ಮಹಿಳಾ ಅಧಿಕಾರಿಯ ಮನೆಯಲ್ಲಿ ಹಿಡನ್ ಕ್ಯಾಮೆರಾ ಇಟ್ಟ ಪ್ರಕರಣಕ್ಕೆ ಇದೀಗ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು ಬಂದಿತ ನಕಲಿ ಪತ್ರರ ಮೊಬೈಲ್ ಪರಿಶೀಲನೆ ವೇಳೆ ಸುಮಾರು ನೂರಕ್ಕೂ ಹೆಚ್ಚು ಬೆತ್ತಲೆ ವಿಡಿಯೋಗಳು ಇದೀಗ ಪತ್ತೆಯಾಗಿದೆ.
ತನಿಖೆ ವೇಳೆ ಈ ಒಂದು ಬೆತ್ತಲೆ ವಿಡಿಯೋಗಳು ಪತ್ತೆಯಾಗಿದ್ದು ಪೊಲೀಸರೇ ಬೆಚ್ಚಿಬಿದ್ದಿದ್ದಾರೆ.ಈ ಹಿಂದೆ ಮಹಿಳಾ ಅಧಿಕಾರಿಯ ಮನೆಯಲ್ಲಿ ರಹಸ್ಯ ಕ್ಯಾಮರಾ ಇಟ್ಟು ಖಾಸಗಿ ದೃಶ್ಯಗಳನ್ನು ಸೆರೆ ಹಿಡಿದು 50 ಲಕ್ಷ ರೂ. ಬೇಡಿಕೆ ಇಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಹಣ ಕೊಡದಿದ್ದರೆ ವಿಡಿಯೋಗಳನ್ನು ವೈರಲ್ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು. ಈ ಪ್ರಕರಣದಲ್ಲಿ ಬಂಧಿತರಾದ ಸಮೀರ್ ಶೇಖ್, ಅಬ್ದುಲ್ ರಶೀದ್ ಮಕಾಂದಾರ್ ಹಾಗೂ ಮೊಹಮ್ಮದ್ ಬಾಳೇಕುಂದ್ರಿ ಅವರನ್ನು ಪೊಲೀಸರು ಮೂರು ದಿನಗಳ ಪೊಲೀಸ್ ಕಸ್ಟಡಿಗೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಮಹಿಳಾ ಅಧಿಕಾರಿಯೊಬ್ಬರ ಮನೆಯ ಲೈಟ್ ಬಲ್ಬ್ ಹೋಲ್ಡರ್‌ಗಳಲ್ಲಿ ರಹಸ್ಯ ಕ್ಯಾಮರಾ ಅಳವಡಿಸಿದ್ದ ಆರೋಪಿಗಳು, ಖಾಸಗಿ ದೃಶ್ಯಗಳನ್ನು ಸೆರೆಹಿಡಿದಿದ್ದರು. ಆ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಡುವುದಾಗಿ ಬೆದರಿಸಿ 50 ಲಕ್ಷ ರೂ. ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ಮಹಿಳಾ ಅಧಿಕಾರಿ ಪೊಲೀಸ್ ಕಮಿಷನರ್‌ಗೆ ದೂರು ನೀಡಿದ್ದರು. ಪೊಲೀಸ್ ಆಯುಕ್ತರ ಸೂಚನೆಯಂತೆ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕಾರ್ಯಾಚರಣೆ ನಡೆಸಿದ್ದ ಪೊಲೀಸರು ಫೆಬ್ರವರಿ 6 ರಂದು ಮೂವರನ್ನು ಬಂಧಿಸಿದ್ದರು.
ಈ ಪ್ರಕರಣ ಬೆಳಗಾವಿಯಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಅಧಿಕಾರಿಗಳ ಭದ್ರತೆ ಹಾಗೂ ಖಾಸಗಿತನದ ಕುರಿತ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ. ಆರೋಪಿಗಳ ವಿರುದ್ಧ ಐಟಿ ಕಾಯ್ದೆ ಸೇರಿದಂತೆ ವಿವಿಧ ವಿಧಿಗಳಡಿ ಪ್ರಕರಣ ದಾಖಲಿಸಲಾಗಿದ್ದು, ಗ್ಯಾಂಗ್ ಇನ್ನಷ್ಟು ಅಧಿಕಾರಿಗಳು ಅಥವಾ ಗಣ್ಯರನ್ನು ಟಾರ್ಗೆಟ್ ಮಾಡಿದ್ದಾರೆಯೇ ಎಂಬ ದಿಕ್ಕಿನಲ್ಲಿ ತನಿಖೆ ಮುಂದುವರಿದಿದೆ.








