ಶಿವಮೊಗ್ಗ : ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತ ಬಾಲಕರು ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಸಾಂಕೇತ್ ನನ್ನು ಭೀಕರವಾಗಿ ಹಲ್ಲೆ ಮಾಡಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಸರ್ಕಾರದಿಂದ 10 ಲಕ್ಷ ಹಾಗು ಶಿಕ್ಷಣ ಇಲಾಖೆಯಿಂದ 5 ಲಕ್ಷ ಪರಿಹಾರ ನೀಡಲಾಗುತ್ತೆ ಎಂದು ಶಿವಮೊಗ್ಗ ಡಿಸಿ ಪ್ರಭುಲಿಂಗ್ ಘೋಷಣೆ ಮಾಡಿದ್ದಾರೆ.
ಹೌದು ನಿನ್ನೆ ರಾತ್ರಿ ಸಾಂಕೇತ ಸ್ನೇಹಿತನ ಜೊತೆಗೆ ಅನ್ಯಕೋಮಿನ ಅಪ್ರಾಪ್ತ ಬಾಲಕರು ಜಗಳ ಮಾಡುತ್ತಿದ್ದರು ಈ ವೇಳೆ ಮಧ್ಯ ಪ್ರವೇಶಿಸಿ ಸಂಕೇತನಿಗೆ ಆ ಅಪ್ರಪ್ತ ಬಾಲಕರು ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಇದೀಗ ಘಟನೆ ಸಂಬಂಧ ಪೊಲೀಸರು ಐವರು ಅಪ್ರಾಪ್ತ ಬಾಲಕರನ್ನು ಅರೆಸ್ಟ್ ಮಾಡಿದ್ದಾರೆ. ಮೃತನ ಕುಟುಂಬಕ್ಕೆ ಸಿಎಂ ಪರಿಹಾರ ನಿಧಿಯಿಂದ 10 ಲಕ್ಷ ರೂಪಾಯಿ ಹಾಗೂ ಶಿಕ್ಷಣ ಇಲಾಖೆಯಿಂದ 5 ಲಕ್ಷ ರೂಪಾಯಿ ಪರಿಹಾರ ಸೇರಿ ಒಟ್ಟು 15 ಲಕ್ಷ ಪರಿಹಾರ ನೀಡಲಾಗಿದೆ ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಅವರು ಘೋಷಣೆ ಮಾಡಿದ್ದಾರೆ.
ಘಟನೆಯ ಹಿನ್ನೆಲೆ ಏನು?
ಶಿವಮೊಗ್ಗದಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ, ವಿದ್ಯಾರ್ಥಿ ಸಂಕೇತ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಲಾಗಿತ್ತು. ಈ ಘಟನೆಯು ಸ್ಥಳೀಯರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಕಾನೂನು ಸುವ್ಯವಸ್ಥೆಯ ಬಗ್ಗೆ ಪ್ರಶ್ನೆಗಳು ಎದ್ದಿದ್ದವು.ನಗರದಲ್ಲಿ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಕೊಲೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ. ಈ ಬೆನ್ನಲ್ಲೇ ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ. ಪರಮೇಶ್ವರ್, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.
ಗೃಹ ಸಚಿವರು ಹೇಳಿದ್ದೇನು?
ಪೊಲೀಸ್ ವರದಿಯನ್ನು ಆಧರಿಸಿ ಗೃಹ ಸಚಿವರು ಈ ಕೆಳಗಿನ ಪ್ರಮುಖ ಅಂಶಗಳನ್ನು ಹಂಚಿಕೊಂಡಿದ್ದಾರೆ. ಘಟನೆ ನಡೆದ ತಕ್ಷಣ ಪೊಲೀಸರು ಕಾರ್ಯಪ್ರವೃತ್ತರಾಗಿದ್ದು, ಈಗಾಗಲೇ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ.
ಇದು ವೈಯಕ್ತಿಕ ದ್ವೇಷ ಅಥವಾ ಕ್ಷುಲ್ಲಕ ಕಾರಣಕ್ಕೆ ನಡೆದ ಘಟನೆಯಾಗಿದ್ದರೂ, ಶಾಂತಿ ಕದಡುವ ಯಾವುದೇ ಪ್ರಯತ್ನವನ್ನು ಸಹಿಸುವುದಿಲ್ಲ. ಆರೋಪಿಗಳಿಗೆ ಕಾನೂನಿನ ಅಡಿ ಕಠಿಣ ಶಿಕ್ಷೆಯಾಗುವಂತೆ ನೋಡಿಕೊಳ್ಳಲಾಗುವುದು. ಯುವಕರು ಮತ್ತು ವಿದ್ಯಾರ್ಥಿಗಳು ಇಂತಹ ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಪೋಷಕರು ಗಮನಹರಿಸಬೇಕು. ಪರಿಸ್ಥಿತಿಯನ್ನು ಹತೋಟಿಗೆ ತರಲು ಶಿವಮೊಗ್ಗ ಪೊಲೀಸರಿಗೆ ಮುಕ್ತ ಅವಕಾಶ ನೀಡಲಾಗಿದೆ.








