ಯಾದಗಿರಿ : ಶಹಾಪುರ ತಾಲೂಕಿನ ಮಹಲ್ ರೋಜಾದ ಸ್ವಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.
ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಹೇಳಲಾಗಿರುವ ವಿಡಿಯೋ ತುಣುಕುಗಳು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ದೂರು ದಾಖಲಿಸಿಕೊಂಡಿದೆ. ವೈರಲ್ ವಿಡಿಯೋವನ್ನು ಪರಿಶೀಲಿಸಿ, ಕೈಗೊಂಡ ಕ್ರಮಗಳ ಕುರಿತು ವಿವರವಾದ ವರದಿ ಸಲ್ಲಿಸುವಂತೆ ಯಾದಗಿರಿ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಆಯೋಗ ಪತ್ರ ರವಾನಿಸಿದೆ.








