ಬೆಂಗಳೂರು: ಬೇಸಿಗೆಯ ಬಿಸಿಲಿನ ಆರಂಭದ ಬೆನ್ನಲ್ಲೇ ರಾಜ್ಯದ ಜನತೆಗೆ ಮುಖ್ಯಮಂತ್ರಿಗಳು ಒಂದು ಸಮಾಧಾನಕರ ಸುದ್ದಿ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ಸಾರ್ವಜನಿಕರಲ್ಲಿ ಆತಂಕ ಮೂಡಿಸಿದ್ದ ವಿದ್ಯುತ್ ದರ ಏರಿಕೆ (Electricity Price Hike) ಕುರಿತಾದ ಚರ್ಚೆಗಳಿಗೆ ಮುಖ್ಯಮಂತ್ರಿಗಳು ಪೂರ್ಣವಿರಾಮ ಇಟ್ಟಿದ್ದಾರೆ.
ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ವಿದ್ಯುತ್ ದರವನ್ನು ಹೆಚ್ಚಿಸುವ ಯಾವುದೇ ಆಲೋಚನೆ ಸರ್ಕಾರದ ಮುಂದಿಲ್ಲ ಎಂದು ಸ್ಪಷ್ಟಪಡಿಸಿದರು.
ಕನ್ನಡಿಗರನ್ನು ಸುರಕ್ಷಿತವಾಗಿ ವಾಪಸ್ಸು ಕರೆತರಲಾಗುವುದು
ಅರಬ್ ದೇಶಗಳಲ್ಲಿ ವಾಸಿಸುತ್ತಿರುವ ಕನ್ನಡಿಗರ ಸುರಕ್ಷತೆಯ ಬಗ್ಗೆ ಮುಖ್ಯ ಕಾರ್ಯದರ್ಶಿ, ಸ್ಥಾನಿಕ ಆಯುಕ್ತರೊಂದಿಗೆ ಚರ್ಚಿಸಲಾಗಿದೆ. ದುಬೈ ವಿಮಾನ ನಿಲ್ದಾಣ ಬಂದ್ ಮಾಡಲಾಗಿದ್ದು, ಅದನ್ನು ತೆರೆದ ಮೇಲೆ ಅವರನ್ನು ಭಾರತಕ್ಕೆ ಸುರಕ್ಷಿತವಾಗಿ ಕರೆ ತರಲು ವ್ಯವಸ್ಥೆ ಮಾಡಲಾಗುವುದು. ವಿಧಾನ ಪರಿಷತ್ ಸದಸ್ಯ ಭೋಜೇಗೌಡರು ದುಬೈದಲ್ಲಿದ್ದು, ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದೇನೆ ಹೋಟೆಲಿನಲ್ಲಿ ಸುರಕ್ಷಿತವಾಗಿರುವುದಾಗಿ ಹೇಳಿದರು ಎಂದರು
ಅಮೆರಿಕಾದ ತದ್ವಿರುದ್ಧ ನಿಲುವನ್ನು ಖಂಡಿಸುತ್ತೇನೆ
ಅಮೆರಿಕಾ ಇರಾನ್ ಮೇಲೆ ಮಾಡಿರುವ ದಾಳಿ ಅನಗತ್ಯವಾದುದು. ಒಂದೆಡೆ ಶಾಂತಿ ಮಾತ್ರ ಪಠಿಸುವ ಅಮೆರಿಕಾ ಮತ್ತೊಂದೆಡೆ ಯುದ್ಧ ಮಾಡುತ್ತದೆ. ಅಮೆರಿಕಾ ತದ್ವಿರುದ್ಧವಾದ ನಿಲುವು ಹೊಂದಿದ್ದು, ಇದನ್ನು ಖಂಡಿಸುವುದಾಗಿ ತಿಳಿಸಿದರು.
ಇರಾನ್ ಅಧ್ಯಕ್ಷ ಆಯಾತೊಲ್ಲಾ ಖಮೇನಿ ಹತ್ಯೆಯಾಗಿದ್ದು, ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ ಎಂದು ಪ್ರಾರ್ಥಿಸುವುದಾಗಿ ಹೇಳಿದರು.








