ರಿಯಾದ್/ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತಾರಕಕ್ಕೇರಿದ್ದು, ಸೌದಿ ಅರೇಬಿಯಾದ ರಿಯಾದ್‌ನಲ್ಲಿರುವ ಅಮೆರಿಕ ರಾಯಭಾರಿ ಕಚೇರಿಯ ಮೇಲೆ ಇರಾನ್ ಎರಡು ಡ್ರೋನ್ ದಾಳಿಗಳನ್ನು ನಡೆಸಿದೆ. ಈ ದಾಳಿಯಿಂದ ಕಚೇರಿಯ ಆವರಣದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಆಸ್ತಿಪಾಸ್ತಿ ಹಾನಿಯಾಗಿದೆ ಎಂದು ಸೌದಿ ರಕ್ಷಣಾ ಸಚಿವಾಲಯ ಮಂಗಳವಾರ ಮುಂಜಾನೆ ತಿಳಿಸಿದೆ.
ಸೋಮವಾರ ರಾತ್ರಿ ಎರಡು ಇರಾನ್ ನಿರ್ಮಿತ ಡ್ರೋನ್‌ಗಳು ಅಮೆರಿಕ ರಾಯಭಾರಿ ಕಚೇರಿಯನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿವೆ. ದಾಳಿಯ ಬೆನ್ನಲ್ಲೇ ಭಾರಿ ಪ್ರಮಾಣದ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಅದೃಷ್ಟವಶಾತ್ ಈ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಟ್ರಂಪ್ ಎಚ್ಚರಿಕೆ
ಈ ದಾಳಿಯನ್ನು ಗಂಭೀರವಾಗಿ ಪರಿಗಣಿಸಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್‌ಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. “ನಮ್ಮ ಪ್ರತಿಕಾರ ಏನಿರಲಿದೆ ಎಂಬುದು ನಿಮಗೆ ಶೀಘ್ರದಲ್ಲೇ ತಿಳಿಯಲಿದೆ” ಎಂದು ಅವರು ಗುಡುಗಿದ್ದಾರೆ.
ಇರಾನ್‌ನ ಸರ್ವೋಚ್ಚ ನಾಯಕ ಆಯತೊಲ್ಲಾ ಅಲಿ ಖಮೇನಿ ಅವರನ್ನು ಅಮೆರಿಕ ಮತ್ತು ಇಸ್ರೇಲ್‌ನ ಜಂಟಿ ವೈಮಾನಿಕ ದಾಳಿಯಲ್ಲಿ ಹತ್ಯೆ ಮಾಡಿದ ನಂತರ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಗರಿಷ್ಠ ಮಟ್ಟ ತಲುಪಿದೆ. ಇದಕ್ಕೆ ಪ್ರತಿಕಾರವಾಗಿ ಇರಾನ್ ಸತತ ನಾಲ್ಕು ದಿನಗಳಿಂದ ಅಮೆರಿಕ ಮತ್ತು ಇಸ್ರೇಲ್ ನೆಲೆಗಳ ಮೇಲೆ ಕ್ಷಿಪಣಿ ಹಾಗೂ ಡ್ರೋನ್ ದಾಳಿಗಳನ್ನು ನಡೆಸುತ್ತಿದೆ.
ಸೌದಿ ಅರೇಬಿಯಾ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿಕೊಂಡು ಇರಾನ್ ಈ ದಾಳಿಗಳನ್ನು ನಡೆಸುತ್ತಿರುವುದು ಜಾಗತಿಕ ಆತಂಕಕ್ಕೆ ಕಾರಣವಾಗಿದೆ.








