ಬೆಂಗಳೂರು: ರಾಜ್ಯದಲ್ಲಿ ಶೀಘ್ರವೇ ನಡೆಯಲಿರುವ ಹೊಸ ಸರ್ಕಾರಿ ನೇಮಕಾತಿಗಳಲ್ಲಿ ಪರಿಶಿಷ್ಟ ಜಾತಿ (SC) ಸಮುದಾಯಕ್ಕೆ ನಿಗದಿಪಡಿಸಲಾದ ಶೇ.15ರಷ್ಟು ಮೀಸಲಾತಿಯಲ್ಲೂ ಒಳಮೀಸಲಾತಿ ಕಲ್ಪಿಸಲು ಸರ್ಕಾರ ಗಂಭೀರ ಚಿಂತನೆ ನಡೆಸಿದೆ. ಈ ಕುರಿತು ಸಚಿವ ಕೆ.ಹೆಚ್. ಮುನಿಯಪ್ಪ ಅವರು ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.
ಹೊಸ ನೇಮಕಾತಿಗಳಲ್ಲಿ ಎ, ಬಿ, ಮತ್ತು ಸಿ ವರ್ಗಗಳ ಅಡಿಯಲ್ಲಿ ಒಳಮೀಸಲಾತಿ ಹಂಚಿಕೆ ಮಾಡುವ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.ಒಳಮೀಸಲಾತಿ ಜಾರಿಗೆ ಸರ್ಕಾರ ಬದ್ಧವಾಗಿದೆ. ಈ ವಿಷಯವನ್ನು ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದೆ ಎಂದು ಮುನಿಯಪ್ಪ ತಿಳಿಸಿದ್ದಾರೆ.
ಹಳೆಯ ಮಾದರಿಯ ಅನುಸರಣೆ: ಈ ಹಿಂದೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಟ್ಟು ಶೇ.17ರಷ್ಟು ಮೀಸಲಾತಿಯನ್ನು ವರ್ಗೀಕರಿಸಿದ ಮಾದರಿಯಲ್ಲೇ, ಈಗ ಹೊಸ ನೇಮಕಾತಿಗಾಗಿ ಮೀಸಲಿಟ್ಟಿರುವ ಶೇ.15ರಷ್ಟು ಕೋಟಾದಲ್ಲೂ ವರ್ಗೀಕರಣ ಮಾಡಲಾಗುತ್ತದೆ ಎಂದರು.
ಸುಪ್ರೀಂ ಕೋರ್ಟ್ ಆದೇಶ ಮತ್ತು ನ್ಯಾ. ನಾಗಮೋಹನ್ ದಾಸ್ ಸಮಿತಿಯ ವರದಿಯ ಅನ್ವಯ, 101 ಜಾತಿಗಳನ್ನು ಎಂಟು ವರ್ಗಗಳಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಲು ಉದ್ದೇಶಿಸಲಾಗಿದೆ. ಹಿಂದಿನ ಮಾದರಿಯಂತೆ ಹಂಚಿಕೆ ನಡೆದರೆ ಅದು ಈ ಕೆಳಗಿನಂತಿರುತ್ತದೆ:
ಎ ವರ್ಗ: ಶೇ.6
ಬಿ ವರ್ಗ: ಶೇ.6
ಸಿ ವರ್ಗ: ಶೇ.5
ಪ್ರಸ್ತುತ 56,342 ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು, ಈ ಹೊಸ ನೇಮಕಾತಿಗಳಲ್ಲಿ ಒಳಮೀಸಲಾತಿ ಅನ್ವಯವಾಗುವ ಸಾಧ್ಯತೆ ದಟ್ಟವಾಗಿದೆ. ಇದು ದೀರ್ಘಕಾಲದ ಬೇಡಿಕೆಯಾಗಿದ್ದು, ಅರ್ಹ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ದೊಡ್ಡ ಹೆಜ್ಜೆಯೆಂದು ಪರಿಗಣಿಸಲಾಗಿದೆ.








