ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ದಾಖಲೆಯ 17ನೇ ಬಜೆಟ್ ಮಂಡನೆ ಮಾಡಿದರು. ಇದರ ಪೆನ್ನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಳೆ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಡಿಕೆ ಶಿವಕುಮಾರ್ ಅವರ ಈ ಒಂದು ದೆಹಲಿ ಪ್ರಯಾಣ ಕುತೂಹಲ ಕೆರಳಿಸಿದೆ.
ಹೌದು ನಾಳೆ ಡಿಕೆ ಶಿವಕುಮಾರ್ ಪ್ರಿಯಾಂಕ್ ಖರ್ಗೆ ಪ್ರತಿನಿಧಿಸುವ ಕಲಬುರಗಿಯ ಚಿತ್ತಾಪುರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮಾಡಲಿದ್ದಾರೆ. ಉದ್ಘಾಟನೆಯ ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಜೊತೆ ಕಲಬುರಗಿಯಿಂದ ದೆಹಲಿಗೆ ಜೊತೆಯಾಗಿ ಪ್ರಯಾಣಿಸಲಿದ್ದಾರೆ.
ನೀರಾವರಿ ಇಲಾಖೆ ಕೆಲವು ಕೆಲಸದ ಹಿನ್ನೆಲೆಯಲ್ಲಿ ದೆಹಲಿಗೆ ಹೋಗುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೂ ಬಜೆಟ್ ಮಂಡನೆ ಬೆನ್ನಲ್ಲೇ, ಹಾಗೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಚರ್ಚೆ ಇರುವಾಗಲೇ, ಎಐಸಿಸಿ ಅಧ್ಯಕ್ಷರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಹೋಗುತ್ತಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.








