ಬೆಂಗಳೂರು : ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವೆಡೆ ಎದುರಾಗಿರುವ ಅಡುಗೆ ಅನಿಲ (LPG) ಸಿಲಿಂಡರ್ ವಿತರಣೆಯ ವಿಳಂಬ ಮತ್ತು ತಾಂತ್ರಿಕ ಸಮಸ್ಯೆಗಳು ಇನ್ನು ಒಂದು ವಾರದೊಳಗೆ ಸಂಪೂರ್ಣವಾಗಿ ಬಗೆಹರಿಯಲಿವೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ ಭರವಸೆ ನೀಡಿದ್ದಾರೆ.
ಬೆಂಗಳೂರಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಗ್ಯಾಸ್ ಸಿಲಿಂಡರ್ ಸಮಸ್ಯೆಯನ್ನು ಗಮನದಲ್ಲಿಟ್ಟುಕೊಂಡು ಹೋಟೆಲ್ ಮಾಲೀಕರು ತಾತ್ಕಾಲಿಕವಾಗಿ ಪರಿಸ್ಥಿತಿಗೆ ಹೊಂದಿಕೊಳ್ಳಬೇಕು ಎಂದು ಮನವಿ ಮಾಡಿದರು.ಇರಾನ್ ಈಗಾಗಲೇ ಭಾರತ ದೇಶದೊಂದಿಗೆ ಸ್ನೇಹ ಸಂಬಂಧವನ್ನು ಬಲಪಡಿಸುವ ಬಗ್ಗೆ ಹೇಳಿಕೆ ನೀಡಿದ್ದು, ಭಾರತಕ್ಕೆ ಹತ್ತರಿಂದ ಹನ್ನೆರಡು ಹಡಗುಗಳ ಮೂಲಕ ಗ್ಯಾಸ್ ಸರಬರಾಜು ಆಗಲಿದೆ. ಈಗಾಗಲೇ ಎರಡು ಹಡಗುಗಳು ಭಾರತಕ್ಕೆ ಪ್ರಯಾಣ ಬೆಳೆಸಿವೆ ಎಂದು ಸಚಿವರು ಮಾಹಿತಿ ನೀಡಿದರು.
ಹೋಟೆಲ್ ತಿಂಡಿಗಳ ಮೇಲೆ ಬಹಳಷ್ಟು ಜನರು ಅವಲಂಬಿತರಾಗಿರುವುದರಿಂದ ಸಮಸ್ಯೆಯನ್ನು ಶೀಘ್ರವೇ ಪರಿಹರಿಸಲು ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ವಿಚಾರವಾಗಿ ಸೋಮವಾರ ಅಧಿಕಾರಿಗಳ ಸಭೆ ಕರೆದಿದ್ದು, ಸಮಸ್ಯೆ ಪರಿಹಾರ ಕುರಿತು ಚರ್ಚೆ ನಡೆಯಲಿದೆ ಎಂದು ಹೇಳಿದರು.ಇದೇ ವೇಳೆ, ಕಾಳಸಂತೆಯಲ್ಲಿ ವಾಣಿಜ್ಯ ಸಿಲಿಂಡರ್ ಮಾರಾಟಕ್ಕೆ ಯಾವುದೇ ಅವಕಾಶ ನೀಡುವುದಿಲ್ಲ. ಜಿಲ್ಲಾಧಿಕಾರಿಗಳು ಈ ವಿಷಯದ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು ಎಂದು ಸಚಿವರು ಸೂಚಿಸಿದರು.








