ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ದಾಖಲಾತಿ ಪ್ರಮಾಣವನ್ನು ಹೆಚ್ಚಿಸಲು ಮತ್ತು ಶೈಕ್ಷಣಿಕ ಗುಣಮಟ್ಟವನ್ನು ಉತ್ತಮಪಡಿಸಲು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ವಿಶೇಷ ಮನವಿ ಮಾಡಿದ್ದಾರೆ.
ದಾಖಲಾತಿ ಆಂದೋಲನಕ್ಕೆ ಚಾಲನೆ: 2026-27ನೇ ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ದಾಖಲಾತಿಯನ್ನು ಗರಿಷ್ಠ ಮಟ್ಟಕ್ಕೆ ಕೊಂಡೊಯ್ಯಲು ಜಿಲ್ಲಾದ್ಯಂತ ವ್ಯವಸ್ಥಿತ ‘ದಾಖಲಾತಿ ಆಂದೋಲನ’ ಹಮ್ಮಿಕೊಳ್ಳುವಂತೆ ಸಚಿವರು ಸೂಚಿಸಿದ್ದಾರೆ. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗಬಾರದು ಎಂಬುದು ಸರ್ಕಾರದ ಮುಖ್ಯ ಆಶಯವಾಗಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಸಚಿವರ ಪತ್ರದ ಪ್ರಮುಖ ಅಂಶಗಳು:
-
ಮನೆ ಮನೆಗೆ ಭೇಟಿ: ಪ್ರತಿ ಗ್ರಾಮದಲ್ಲಿ ಎಸ್‌ಡಿಎಂಸಿ ಸದಸ್ಯರು, ಶಿಕ್ಷಕರು ಮತ್ತು ಹಳೆಯ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮನೆ ಮನೆಗೆ ಭೇಟಿ ನೀಡಿ, ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಲು ಪೋಷಕರ ಮನವೊಲಿಸಬೇಕು.
-
ಸಮುದಾಯದ ಸಹಭಾಗಿತ್ವ: ಹಳೆಯ ವಿದ್ಯಾರ್ಥಿಗಳ ವಾಟ್ಸಾಪ್ ಗ್ರೂಪ್‌ಗಳ ಮೂಲಕ ಶಾಲಾ ಅಭಿವೃದ್ಧಿ ಮತ್ತು ದಾಖಲಾತಿ ಪ್ರಕ್ರಿಯೆಯಲ್ಲಿ ಸಾರ್ವಜನಿಕರ ನೆರವು ಪಡೆಯಬೇಕು.
-
ಸರ್ಕಾರಿ ಸೌಲಭ್ಯಗಳ ಮಾಹಿತಿ: ಸರ್ಕಾರಿ ಶಾಲೆಗಳಲ್ಲಿ ನೀಡಲಾಗುತ್ತಿರುವ ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಶೂ-ಸಾಕ್ಸ್, ಬಿಸಿಯೂಟ, ಹಾಲು ಮತ್ತು ಮೊಟ್ಟೆ ಸೌಲಭ್ಯಗಳ ಬಗ್ಗೆ ಪೋಷಕರಲ್ಲಿ ಅರಿವು ಮೂಡಿಸಬೇಕು.
-
ವಿಶೇಷ ಕಾರ್ಯಕ್ರಮಗಳು: ಎಲ್‌ಕೆಜಿ (LKG) ಮತ್ತು ಯುಕೆಜಿ (UKG) ತರಗತಿಗಳ ಪ್ರಾರಂಭ, ದ್ವಿಭಾಷಾ ಮಾಧ್ಯಮದ ಶಿಕ್ಷಣ ಹಾಗೂ ಉಚಿತ NEET ಮತ್ತು CET ತರಬೇತಿಯಂತಹ ಕ್ರಮಗಳಿಂದ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರಲ್ಲಿ ಸಕಾರಾತ್ಮಕ ಭಾವನೆ ಮೂಡುತ್ತಿದೆ ಎಂದು ಸಚಿವರು ಉಲ್ಲೇಖಿಸಿದ್ದಾರೆ.
ಜಿಲ್ಲಾಧಿಕಾರಿಗಳಿಗೆ ಜವಾಬ್ದಾರಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಆಶಯದಂತೆ ಈ ಮಹತ್ವಕಾಂಕ್ಷಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಜಿಲ್ಲಾಧಿಕಾರಿಗಳು ವೈಯಕ್ತಿಕ ಆಸಕ್ತಿ ವಹಿಸಬೇಕು ಎಂದು ಮಧು ಬಂಗಾರಪ್ಪ ಅವರು ಮನವಿ ಮಾಡಿದ್ದಾರೆ. ಪತ್ರದ ಕೊನೆಯಲ್ಲಿ ಸಚಿವರು ಯುಗಾದಿ ಹಬ್ಬದ ಶುಭಾಶಯಗಳನ್ನೂ ಕೋರಿದ್ದಾರೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…









