ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿಯೊಬ್ಬನ ಮೇಲೆ ಮೂವರು ಶಿಕ್ಷಕರು ಅಮಾನುಷವಾಗಿ ಗಾಯವಾಗುವಂತೆ ಕೋಲಿನಿಂದ ಹೊಡೆದು ಹಲ್ಲೆ ಮಾಡಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆ ಸಂಬಂಧ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಶಾಲೆಯ ಮುಖ್ಯೋಪಾಧ್ಯಾಯ ರಮೇಶ್ ನಾರಾಯಣ ಸೇರಿದಂತೆ ಇತರೆ ಶಿಕ್ಷಕರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಲಾಗಿದೆ. ಆ ಮೂಲಕ ವಿದ್ಯಾರ್ಥಿಯ ಮೇಲೆ ಹಲ್ಲೆ ಮಾಡಿದಂತ ಶಿಕ್ಷಕರಿಗೆ ಕಾನೂನಿನ ಬಿಸಿ ಮುಟ್ಟಿಸಲಾಗಿದೆ.
ಈ ಕುರಿತಂತೆ ಶಿವಮೊಗ್ಗ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷರಾದಂತ ಶಶಿಧರ್ ಎಸ್ ಕೋಸಂಬೆ ಅವರು ಪತ್ರ ಬರೆದಿದ್ದಾರೆ. ಅದರಲ್ಲಿ ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಶೆಡ್ತೀಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಯಾದ ಸುಶೃತ ಮಾರ್ಚ್.12, 2026ರಂದು ಬೆಳಗ್ಗೆ 11 ಗಂಟೆಗೆ ವಿದ್ಯಾರ್ಥಿಯು ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರಾದ ರಮೇಶ್ ನಾರಾಯಣ್ ಸೇರಿದಂತೆ ಇತರೆ ಶಿಕ್ಷಕರು ತೀವ್ರ ರೀತಿಯಲ್ಲಿ ಹಲ್ಲೆ ಮಾಡಿದ್ದಾರೆ ಎಂದಿದ್ದಾರೆ.
ಈ ಮಗುವಿನ ಮೈಮೇಲೆ ಬಾಸುಂಡೆಗಳು ಬಂದಿದ್ದು ಅಲ್ಲದೇ ಕೈ ಬೆರಳುಗಳು ರಕ್ತ ಬರುವ ಹಾಗೆ ಜಜ್ಜಿದ್ದಾರೆ. ಈ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಬಾಲಕನಿಗೆ ಉಂಟಾದ ಹಲ್ಲೆಯ ತೀವ್ರತೆ ತಿಳಿದು ಬಂದಿರುತ್ತದೆ. ಇದನ್ನು ಗಮನಿಸಿದ ಪೋಷಕರು ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಇತರ ಶಿಕ್ಷಕರ ವಿರುದ್ಧ ಕಾನೂನು ಕ್ರಮವಾಗಬೇಕೆಂದು ಒತ್ತಾಯಿಸಿರುವ ಬಗ್ಗೆ ವರದಿಯಾಗಿರುತ್ತದೆ. ಸದರಿ ವರದಿಯನ್ನಾಧರಿಸಿ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರನ್ನು ದಾಖಲಿಸಿಕೊಳ್ಳಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.
ಆದ್ದರಿಂದ ತಾವು ಕೂಡಲೇ ಶಾಲೆಗೆ ಭೇಟಿ ನೀಡಿ ಘಟನೆಗೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿ ತಪ್ಪಿತಸ್ಥರ ವಿರುದ್ಧ ಇಲಾಖಾ ನಿಯಮಾನುಸಾರ ಕ್ರಮ ಜರುಗಿಸಿ ಕೈಗೊಂಡ ಕ್ರಮದ ವರದಿಯನ್ನು ಆಯೋಗಕ್ಕೆ ಸಲ್ಲಿಸಲು ಶಿವಮೊಗ್ಗದ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಿಗೆ ಪತ್ರದಲ್ಲಿ ಸೂಚಿಸಿದ್ದಾರೆ.
ಒಟ್ಟಾರೆಯಾಗಿ ವಿದ್ಯಾರ್ಥಿಯೊಬ್ಬನ ಮೇಲೆ ಅಮಾನುಷ ರೀತಿಯಲ್ಲಿ ಹಲ್ಲೆ ಮಾಡಿದಂತ ಶೆಡ್ತೀಕೆರೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು ಸ್ವಯಂ ಪ್ರೇರಿತ ಕೇಸ್ ದಾಖಲಿಸಿ ಬಿಸಿ ಮುಟ್ಟಿಸಿದೆ. ಈಗಾಗಲೇ ಸಹ ಶಿಕ್ಷಕ ಪ್ರಮೋದ್ ಸಣ್ಣಕ್ಕಿಯನ್ನು ಅಮಾನತುಗೊಳಿಸಲಾಗಿದ್ದು, ಇನ್ನುಳಿದ ಶಿಕ್ಷಕರ ವಿರುದ್ಧ ಕ್ರಮ ಆಗೋದು ಗ್ಯಾರಂಟಿ ಎನ್ನಲಾಗುತ್ತಿದೆ. ಆ ನಿಟ್ಟಿನಲ್ಲಿ ಸಂಬಂಧ ಪಟ್ಟ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಯಾವ ಕ್ರಮ ಜರುಗಿಸಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು…

ಸಾಧನೆಯ ಶಿಖರಕ್ಕೇರಿದ ಸಾಗರದ ‘ಯುವ ಉದ್ಯಮಿ’: ‘RBD ಮಹೇಶ್’ಗೆ ‘ನಾರಾಯಣ ರತ್ನ ಪ್ರಶಸ್ತಿ’ಯ ಗೌರವ
ಸಾಗರದ ಆನಂದಪುರದಲ್ಲಿ ಹೈಟೆನ್ಷನ್ ವಿದ್ಯುತ್ ಲೈನ್ ಸರ್ವೇ ವೇಳೆ ಹಲ್ಲೆ; ಏಳು ಮಂದಿ ವಿರುದ್ಧ ಕೊಲೆ ಯತ್ನ ಪ್ರಕರಣ ದಾಖಲು








