ನವದೆಹಲಿ:ಪಶ್ಚಿಮ ಏಷ್ಯಾದಲ್ಲಿ (West Asia) ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯಲ್ಲಿ ನೀಡಿದ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಈ ವಿಷಯದ ಬಗ್ಗೆ ಸಂಸತ್ತಿನಲ್ಲಿ ಸಮಗ್ರ ಚರ್ಚೆಗೆ ಅವಕಾಶ ನೀಡಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಸೋಮವಾರ ಸಂಸತ್ತಿನ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಿಯಾಂಕಾ ಗಾಂಧಿ, “ಪಶ್ಚಿಮ ಏಷ್ಯಾದ ಪರಿಸ್ಥಿತಿಯ ಬಗ್ಗೆ ಪ್ರಧಾನಿಗಳು ದೇಶಕ್ಕೆ ಮಾಹಿತಿ ನೀಡಿದ್ದಾರೆ, ಆದರೆ ಅವರು ಅದರಲ್ಲಿ ಹೊಸದೇನನ್ನೂ ಹೇಳಿಲ್ಲ. ನಾವು ಈಗಾಗಲೇ ಈ ವಿಷಯದ ಬಗ್ಗೆ ಚರ್ಚೆ ನಡೆಸಲು ನೋಟಿಸ್ ನೀಡಿದ್ದೇವೆ. ವಿರೋಧ ಪಕ್ಷಗಳು ಸಹ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಸಂಸತ್ತಿನಲ್ಲಿ ಚರ್ಚೆ ನಡೆಯುವುದು ಅವಶ್ಯಕ,” ಎಂದು ಹೇಳಿದರು.
ಇದಕ್ಕೂ ಮುನ್ನ ಲೋಕಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ,ಪಶ್ಚಿಮ ಏಷ್ಯಾದ ಸಂಘರ್ಷವು ಜಾಗತಿಕ ಆರ್ಥಿಕತೆ ಮತ್ತು ಜನರ ಜೀವನೋಪಾಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಕಳವಳ ವ್ಯಕ್ತಪಡಿಸಿದರು. ಸವಾಲಾಗಿದ್ದರೂ, ದೇಶದಲ್ಲಿ ಅಡುಗೆ ಅನಿಲ (LPG) ಮತ್ತು ಇಂಧನ ಪೂರೈಕೆಗೆ ಯಾವುದೇ ತೊಂದರೆಯಾಗದಂತೆ ಸರ್ಕಾರ ಕ್ರಮ ವಹಿಸಿದೆ ಎಂದು ಭರವಸೆ ನೀಡಿದರು.ಸಂಘರ್ಷ ಪೀಡಿತ ಪ್ರದೇಶಗಳಲ್ಲಿರುವ ಭಾರತೀಯರ ಸುರಕ್ಷತೆಯೇ ಸರ್ಕಾರದ ಮೊದಲ ಆದ್ಯತೆ ಎಂದು ಅವರು ತಿಳಿಸಿದರು.








