ನವದೆಹಲಿ: ದೇಶದ ಎಲ್‌ಪಿಜಿ (LPG) ಗ್ರಾಹಕರಿಗೆ ತೈಲ ಕಂಪನಿಗಳು ಹೊಸ ಶಾಕ್ ನೀಡಿವೆ. ಇನ್ನು ಮುಂದೆ ಒಂದು ಸಿಲಿಂಡರ್ ಬುಕ್ ಮಾಡಿದ ನಂತರ ಮುಂದಿನ ಸಿಲಿಂಡರ್ ಬುಕ್ ಮಾಡಲು ಕನಿಷ್ಠ 35 ದಿನಗಳ ಕಾಲ ಕಾಯಲೇಬೇಕು ಎಂಬ ಹೊಸ ನಿಯಮವನ್ನು ಜಾರಿಗೆ ತರಲಾಗಿದೆ. ಪಶ್ಚಿಮ ಏಷ್ಯಾದಲ್ಲಿನ ಯುದ್ಧದ ಭೀತಿಯಿಂದಾಗಿ ಉಂಟಾಗಿರುವ ಇಂಧನ ಅಭಾವವನ್ನು ತಡೆಯಲು ಈ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಈ ಹಿಂದೆ ಒಂದು ಸಿಲಿಂಡರ್ ಪಡೆದ 15 ಅಥವಾ 21 ದಿನಗಳ ನಂತರ ಮತ್ತೊಂದು ಸಿಲಿಂಡರ್ ಬುಕ್ ಮಾಡಲು ಅವಕಾಶವಿತ್ತು. ಆದರೆ ಈಗ ಈ ಅವಧಿಯನ್ನು 35 ದಿನಗಳಿಗೆ ಹೆಚ್ಚಿಸಲಾಗಿದೆ.
ಈ ನಿಯಮವು ದೇಶದ ಎಲ್ಲಾ ಸಬ್ಸಿಡಿ ಮತ್ತು ಸಬ್ಸಿಡಿ ರಹಿತ ಮನೆಬಳಕೆಯ ಎಲ್‌ಪಿಜಿ ಗ್ರಾಹಕರಿಗೆ ಅನ್ವಯವಾಗಲಿದೆ. ಉಜ್ವಲ ಯೋಜನೆಯ ಫಲಾನುಭವಿಗಳಿಗೂ ಈ ನಿಯಮ ಅನ್ವಯಿಸುತ್ತದೆ.
ಪಶ್ಚಿಮ ಏಷ್ಯಾದ ಸಂಘರ್ಷದಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅನಿಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ದೇಶದಲ್ಲಿ ಎಲ್‌ಪಿಜಿ ದಾಸ್ತಾನು ಸುಸ್ಥಿತಿಯಲ್ಲಿಡಲು ಮತ್ತು ಕೃತಕ ಅಭಾವ ಅಥವಾ ಕಪ್ಪುಮಾರುಕಟ್ಟೆಯನ್ನು ತಡೆಯಲು ಸರ್ಕಾರ ಈ ನಿರ್ಧಾರ ತೆಗೆದುಕೊಂಡಿದೆ.








