ನವದೆಹಲಿ/ಕೋಝಿಕ್ಕೋಡ್: ಕಾಂಗ್ರೆಸ್ ಸಂಸದೀಯ ಮಂಡಳಿ ಅಧ್ಯಕ್ಷೆ ಸೋನಿಯಾ ಗಾಂಧಿ (79) ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಮ್ಮ ನಿಗದಿತ ಕೇರಳ ಪ್ರವಾಸವನ್ನು ದಿಢೀರ್ ರದ್ದುಗೊಳಿಸಿದ್ದಾರೆ. ಮಂಗಳವಾರ ತಡರಾತ್ರಿ ಸೋನಿಯಾ ಗಾಂಧಿ ಅವರನ್ನು ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಹವಾಮಾನ ಬದಲಾವಣೆಯಿಂದಾಗಿ ಸೋನಿಯಾ ಗಾಂಧಿ ಅವರಿಗೆ ಅಸ್ವಸ್ಥತೆ ಕಾಣಿಸಿಕೊಂಡಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಕೇರಳದ ವಿಧಾನಸಭಾ ಚುನಾವಣಾ ಪ್ರಚಾರಕ್ಕಾಗಿ ರಾಹುಲ್ ಗಾಂಧಿ ಇಂದು (ಮಾರ್ಚ್ 25) ಕೋಝಿಕ್ಕೋಡ್‌ನಲ್ಲಿ ಬೃಹತ್ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಬೇಕಿತ್ತು. ಆದರೆ ತಾಯಿಯ ಅನಾರೋಗ್ಯದ ಸುದ್ದಿ ತಿಳಿಯುತ್ತಿದ್ದಂತೆ ಅವರು ಪ್ರವಾಸ ಕೈಬಿಟ್ಟು ಆಸ್ಪತ್ರೆಗೆ ಧಾವಿಸಿದ್ದಾರೆ.
ರಾಹುಲ್ ಗಾಂಧಿ ಅವರ ಅನುಪಸ್ಥಿತಿಯಲ್ಲಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೋಝಿಕ್ಕೋಡ್‌ನಲ್ಲಿ ನಡೆಯಲಿರುವ ಯುಡಿಎಫ್ (UDF) ಚುನಾವಣಾ ಸಮಾವೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.








