ಬೆಂಗಳೂರು: ರಾಜ್ಯದಲ್ಲಿ ಒಂದೆಡೆ ಬಿಸಿಲಿನ ಬೇಗೆ ಹೆಚ್ಚಾಗುತ್ತಿದ್ದರೆ, ಮತ್ತೊಂದೆಡೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ವರುಣನ ಆಗಮನವಾಗುವ ಮುನ್ಸೂಚನೆ ಸಿಕ್ಕಿದೆ. ಹವಾಮಾನ ಇಲಾಖೆಯ ವರದಿಯಂತೆ, ರಾಜ್ಯದ ಸುಮಾರು 14 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಏಪ್ರಿಲ್ 2ರವರೆಗೆ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಮಂಡ್ಯ ಹಾಗೂ ಬೆಂಗಳೂರು ಸೇರಿದಂತೆ ಒಟ್ಟು 14 ರಿಂದ 15 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.ಮಳೆಯ ಸಮಯದಲ್ಲಿ ಗಂಟೆಗೆ 30 ರಿಂದ 50 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುವ ನಿರೀಕ್ಷೆಯಿದೆ.
ಉತ್ತರ ಕರ್ನಾಟಕದಲ್ಲಿ ಬಿಸಿಲ ಅಬ್ಬರ ಜೋರಾಗಿದ್ದು, ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ 38.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಳ್ಳಾರಿ, ವಿಜಯನಗರ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಾಪಮಾನವು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗಿದೆ.








