ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಗುಣಮಟ್ಟದ ಆರೋಗ್ಯ ಸೇವೆ ನೀಡುವ ನಿಟ್ಟಿನಲ್ಲಿ ಖಾಲಿ ಇರುವ 1500ಕ್ಕೂ ಹೆಚ್ಚು ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ (Lab Technicians) ಹುದ್ದೆಗಳನ್ನು ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಭರವಸೆ ನೀಡಿದ್ದಾರೆ.
ನಗರದ ಕುವೆಂಪು ಕಲಾಕ್ಷೇತ್ರದಲ್ಲಿ ಭಾನುವಾರ ಕರ್ನಾಟಕ ರಾಜ್ಯ ಮೆಡಿಕಲ್ ಅಸೋಸಿಯೇಷನ್ ಹಮ್ಮಿಕೊಂಡಿದ್ದ ‘ವೈದ್ಯಕೀಯ ಪ್ರಯೋಗಾಲಯ ತಂತ್ರಜ್ಞರ ರಾಜ್ಯ ಸಮ್ಮೇಳನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರ್ಕಾರಿ ಆಸ್ಪತ್ರೆಗಳಲ್ಲಿ ರಕ್ತ ಮತ್ತು ಮೂತ್ರ ಪರೀಕ್ಷೆ ನಡೆಸಲು ಸುಸಜ್ಜಿತ ಪ್ರಯೋಗಾಲಯಗಳಿವೆ. ಆದರೆ, ತಂತ್ರಜ್ಞರ ಕೊರತೆಯಿಂದಾಗಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ತಕ್ಷಣದ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ವೇತನ ಹೆಚ್ಚಳದ ಭರವಸೆ
ಪ್ರಯೋಗಾಲಯ ತಂತ್ರಜ್ಞರ ದೀರ್ಘಕಾಲದ ಬೇಡಿಕೆಯಾಗಿದ್ದ ವೇತನ ಪರಿಷ್ಕರಣೆ ಕುರಿತೂ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದರು. ಕಾರ್ಮಿಕ ನಿಯಮಗಳ ಅನ್ವಯ ಪ್ರಸ್ತುತ ಇರುವ 18,225 ರೂಪಾಯಿಗಳ ಮಾಸಿಕ ವೇತನವನ್ನು 25,000 ರೂಪಾಯಿಗಳಿಗೆ ಹೆಚ್ಚಿಸಲು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಅವರು ಹೇಳಿದರು.








