ದೋಹಾ:ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕ-ಇಸ್ರೇಲ್ ನಡುವಿನ ಸಂಘರ್ಷ ಭೀಕರ ಸ್ವರೂಪ ಪಡೆದುಕೊಂಡಿದೆ. ಬುಧವಾರ ಮುಂಜಾನೆ ಇರಾನ್ ನಡೆಸಿದ ಸರಣಿ ದಾಳಿಗಳಲ್ಲಿ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಕತಾರ್ ಕರಾವಳಿಯ ಸಮೀಪವಿದ್ದ ತೈಲ ನೌಕೆ ಗುರಿಯಾಗಿವೆ.
ಇರಾನ್ ಉಡಾಯಿಸಿದ ಸ್ಫೋಟಕ ತುಂಬಿದ ಡ್ರೋನ್ ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಂಧನ ಟ್ಯಾಂಕ್‌ಗೆ ಅಪ್ಪಳಿಸಿದೆ. ಇದರಿಂದ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಕುವೈತ್ ಸುದ್ದಿ ಸಂಸ್ಥೆ ‘ಕುನಾ’ (KUNA) ವರದಿ ಮಾಡಿದೆ. ಕತಾರ್ ಕರಾವಳಿಯ ಸಮೀಪ ಚಲಿಸುತ್ತಿದ್ದ ತೈಲ ನೌಕೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ನೌಕೆಯಲ್ಲಿದ್ದ 21 ಸಿಬ್ಬಂದಿಯನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದ್ದು, ನೌಕೆಗೆ ಭಾರಿ ಹಾನಿಯಾಗಿದೆ.
ಇರಾನ್ ತನ್ನ ನಿಯಂತ್ರಣದಲ್ಲಿರುವ ಹಾರ್ಮುಜ್ ಜಲಸಂಧಿಯನ್ನು (Strait of Hormuz) ಸಂಪೂರ್ಣವಾಗಿ ಬಂದ್ ಮಾಡಿದ್ದು, ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ 104 ಡಾಲರ್ ದಾಟಿದೆ.ಇರಾನ್‌ನ ಈ ಕೃತ್ಯಕ್ಕೆ ಪ್ರತಿಯಾಗಿ ಇಸ್ರೇಲ್ ಮತ್ತು ಅಮೆರಿಕ ಪಡೆಗಳು ಇರಾನ್ ರಾಜಧಾನಿ ತೆಹ್ರಾನ್ ಮೇಲೆ ವೈಮಾನಿಕ ದಾಳಿ ನಡೆಸಿವೆ. ತೆಹ್ರಾನ್‌ನಲ್ಲಿರುವ ರೆವಲ್ಯೂಷನರಿ ಗಾರ್ಡ್ಸ್ ಕೇಂದ್ರ ಕಚೇರಿ ಮೇಲೆ ಬಾಂಬ್ ದಾಳಿ ನಡೆದಿದೆ ಎಂದು ವರದಿಗಳು ತಿಳಿಸಿವೆ.
ಈ ಯುದ್ಧದ ಪರಿಣಾಮವಾಗಿ ಭಾರತದ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಏರಿಕೆಯಾಗುವ ಆತಂಕ ಎದುರಾಗಿದೆ. ಅಲ್ಲದೆ, ಗಲ್ಫ್ ರಾಷ್ಟ್ರಗಳಲ್ಲಿರುವ ಲಕ್ಷಾಂತರ ಭಾರತೀಯರ ಸುರಕ್ಷತೆಯ ಬಗ್ಗೆ ಭಾರತ ಸರ್ಕಾರ ತೀವ್ರ ನಿಗಾ ವಹಿಸಿದೆ.








