ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಭಾನುವಾರ ರಾತ್ರಿ ಭೀಕರ ಗ್ಯಾಂಗ್ ವಾರ್ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ರೌಡಿಶೀಟರ್ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಸಿಗರೇಟ್ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಸಂಘರ್ಷದಲ್ಲಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಘಟನೆಯ ವಿವರ:
ಮದ್ದೂರು ಪಟ್ಟಣದ ಹೊಳೆ ಆಂಜನೇಯ ಸ್ವಾಮಿ ದೇಗುಲದ ರಸ್ತೆಯಲ್ಲಿರುವ ಪಟೇಲ್ ಸಾಮಿಲ್ ಬಳಿ ಈ ಘಟನೆ ಸಂಭವಿಸಿದೆ. ಮರಳಿಗ ಗ್ರಾಮದ ನಿವಾಸಿ, ರೌಡಿಶೀಟರ್ ಯಶ್ವಂತ್ ಅಲಿಯಾಸ್ ಕಜ್ಜಿ ಅಭಿ (23) ಕೊಲೆಯಾದ ದುರ್ದೈವಿ. ಕೇವಲ ಸಿಗರೇಟ್ ಹಂಚಿಕೊಳ್ಳುವ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಆರಂಭವಾಗಿ, ಅದು ವಿಕೋಪಕ್ಕೆ ತಿರುಗಿ ಮಾರಕಾಸ್ತ್ರಗಳಿಂದ ಪರಸ್ಪರ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.
ಸ್ಥಳದಲ್ಲೇ ಸಾವು – ಇಬ್ಬರಿಗೆ ಗಂಭೀರ ಗಾಯ:
ದುಷ್ಕರ್ಮಿಗಳ ಭೀಕರ ದಾಳಿಗೆ ತುತ್ತಾದ ಯಶ್ವಂತ್ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ. ದಾಳಿಯ ವೇಳೆ ಆತನೊಂದಿಗಿದ್ದ ಗೊರವನಹಳ್ಳಿ ಗ್ರಾಮದ ದರ್ಶನ್ ಮತ್ತು ಸಚಿನ್ ಎಂಬುವವರಿಗೂ ಗಂಭೀರ ಗಾಯಗಳಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯದ ಮಿಮ್ಸ್ (MIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರ ಸ್ಥಿತಿ ಸದ್ಯ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಪೊಲೀಸ್ ತನಿಖೆ:
ಘಟನಾ ಸ್ಥಳಕ್ಕೆ ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಶೋಭಾರಾಣಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಮದ್ದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ : ಗಿರೀಶ್ ರಾಜ್ ಮಂಡ್ಯ








