ಜಕಾರ್ತಾ: ಇಂಡೋನೇಷ್ಯಾದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣವಾದ ‘ಸೋಕರ್ನೋ-ಹಟ್ಟಾ’ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 3ರಲ್ಲಿ ಇಂದು ಬೆಳಿಗ್ಗೆ ಚಾವಣಿ (Roof) ಕುಸಿತ ಸಂಭವಿಸಿದೆ. ಈ ಘಟನೆಯಿಂದಾಗಿ ವಿಮಾನ ನಿಲ್ದಾಣದಲ್ಲಿದ್ದ ನೂರಾರು ಪ್ರಯಾಣಿಕರು ದಿಕ್ಕಾಪಾಲಾಗಿ ಓಡುತ್ತಿರುವ ದೃಶ್ಯಗಳು ಕಂಡುಬಂದಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಟರ್ಮಿನಲ್ 3ರ ನಿರ್ಗಮನ ದ್ವಾರದ ಬಳಿಯಿರುವ ಮೇಲ್ಛಾವಣಿಯ ಒಂದು ಭಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದೆ. ಈ ವೇಳೆ ಕೆಳಗೆ ನಿಂತಿದ್ದ ಪ್ರಯಾಣಿಕರು ಕಿರುಚುತ್ತಾ ಸುರಕ್ಷಿತ ಸ್ಥಳಗಳತ್ತ ಧಾವಿಸಿದ್ದಾರೆ.ಘಟನೆಯ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಚಾವಣಿಯ ಪ್ಲಾಸ್ಟರ್ ಮತ್ತು ಕಬ್ಬಿಣದ ಸರಳುಗಳು ಕೆಳಗೆ ಬೀಳುತ್ತಿರುವುದು ಮತ್ತು ಧೂಳಿನ ಮೋಡ ಎದ್ದಿರುವುದು ವಿಡಿಯೋದಲ್ಲಿ ಕಂಡುಬಂದಿದೆ.
ಘಟನೆಯಲ್ಲಿ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗಾಯಾಳುಗಳನ್ನು ತಕ್ಷಣವೇ ಹತ್ತಿರದ ವೈದ್ಯಕೀಯ ಕೇಂದ್ರಕ್ಕೆ ದಾಖಲಿಸಲಾಗಿದೆ.








