ಬೆಂಗಳೂರು: ಬಿಸಿಲಿನ ತಾಪದಿಂದ ಕಂಗಾಲಾಗಿದ್ದ ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಸಿಹಿ ಸುದ್ದಿ ನೀಡಿದೆ. ಇಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ವಿವಿಧ ಭಾಗಗಳಲ್ಲಿ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೋಲಾರ ಮತ್ತು ಚಾಮರಾಜನಗರದಲ್ಲಿ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ. ಏಪ್ರಿಲ್ 11ರ ವರೆಗೆ ರಾಜ್ಯದ ವಿವಿಧೆಡೆ ಮಳೆ ಮುಂದುವರಿಯುವ ಸಾಧ್ಯತೆಯಿದೆ.
ಕರಾವಳಿ ಭಾಗಕ್ಕೆ ಎಚ್ಚರಿಕೆ: ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನ ಮತ್ತು ಸೆಕೆ ಇರಲಿದ್ದು, ಇದರೊಂದಿಗೆ ಗುಡುಗು ಸಹಿತ ಮಳೆಯೂ ಬರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.
ಬೆಂಗಳೂರು ಹವಾಮಾನ: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಕಳೆದ ಕೆಲವು ದಿನಗಳಿಂದ ನಗರದಲ್ಲಿ ಮೋಡಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.








