ಮುಂಬೈ:ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾದ ಮುುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ 1ರಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಸಿದೆ. ಘಟನಾ ಸ್ಥಳಕ್ಕೆ ತಕ್ಷಣವೇ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತಂದಿದ್ದಾರೆ.
ಟರ್ಮಿನಲ್ 1ರ ನಿರ್ಗಮನ ದ್ವಾರದ ಬಳಿ (Departure Gate) ಇರುವ ಲಾಂಜ್ ಪ್ರದೇಶದಲ್ಲಿ ಮೊದಲಿಗೆ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ. ಕೂಡಲೇ ಮುನ್ನೆಚ್ಚರಿಕಾ ಕ್ರಮವಾಗಿ ಆ ಪ್ರದೇಶದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಯಿತು.
ಬೆಂಕಿ ಕಾಣಿಸಿಕೊಂಡ ತಕ್ಷಣ ಎಚ್ಚೆತ್ತುಕೊಂಡ ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಅಗ್ನಿ ಅವಘಡದ ಹಿನ್ನೆಲೆಯಲ್ಲಿ ಟರ್ಮಿನಲ್ 1ರಿಂದ ಹೊರಡುವ ಕೆಲವು ವಿಮಾನಗಳ ಹಾರಾಟದಲ್ಲಿ ವಿಳಂಬವಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಕೆಲ ಕಾಲ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿತ್ತು.
ಪ್ರಾಥಮಿಕ ತನಿಖೆಯ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದಾಗಿ ಈ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಅಂದಾಜಿಸಲಾಗಿದೆ. ಆದರೂ ನಿಖರ ಕಾರಣ ತಿಳಿಯಲು ವಿಮಾನ ನಿಲ್ದಾಣದ ಅಧಿಕಾರಿಗಳು ತನಿಖೆಗೆ ಆದೇಶಿಸಿದ್ದಾರೆ.








