ಪಾಟ್ನಾ: ಬಿಹಾರ ರಾಜಕೀಯದಲ್ಲಿ ದೊಡ್ಡ ಬದಲಾವಣೆಯ ಪರ್ವ ಆರಂಭವಾಗಿದೆ. ದಶಕಗಳ ಕಾಲ ಬಿಹಾರದ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲು ದಿನಾಂಕ ನಿಗದಿಪಡಿಸಿದ್ದಾರೆ. ಏಪ್ರಿಲ್ 13ರಂದು ಅವರು ಅಧಿಕೃತವಾಗಿ ರಾಜೀನಾಮೆ ಸಲ್ಲಿಸಲಿದ್ದು, ಏಪ್ರಿಲ್ 14ರ ಸಂಕ್ರಾಂತಿಯ ನಂತರ ಬಿಹಾರಕ್ಕೆ ಹೊಸ ಮುಖ್ಯಮಂತ್ರಿ ನೇಮಕವಾಗುವುದು ಖಚಿತವಾಗಿದೆ.
ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಿರುವ ನಿತೀಶ್ ಕುಮಾರ್ ಅವರು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗುವ ಉದ್ದೇಶದಿಂದ ಈ ನಿರ್ಧಾರ ಕೈಗೊಂಡಿದ್ದಾರೆ.ಏಪ್ರಿಲ್ 13ರಂದು ರಾಜೀನಾಮೆ ನೀಡಿದ ನಂತರ, ಏಪ್ರಿಲ್ 14ರಂದು ಎನ್‌ಡಿಎ (NDA) ಮೈತ್ರಿಕೂಟದ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಈ ಸಭೆಯಲ್ಲಿ ಹೊಸ ಮುಖ್ಯಮಂತ್ರಿಯ ಹೆಸರನ್ನು ಅಧಿಕೃತವಾಗಿ ಘೋಷಿಸುವ ಸಾಧ್ಯತೆಯಿದೆ.
ಸದ್ಯದ ವರದಿಗಳ ಪ್ರಕಾರ, ಮೈತ್ರಿ ಪಕ್ಷವಾದ ಬಿಜೆಪಿಯ ನಾಯಕರೊಬ್ಬರಿಗೆ ಮುಖ್ಯಮಂತ್ರಿ ಪಟ್ಟ ಒಲಿಯುವ ಸಾಧ್ಯತೆ ದಟ್ಟವಾಗಿದೆ. ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಅಥವಾ ವಿಜಯ್ ಕುಮಾರ್ ಸಿನ್ಹಾ ಅವರ ಹೆಸರುಗಳು ರೇಸ್‌ನಲ್ಲಿ ಮುಂಚೂಣಿಯಲ್ಲಿವೆ.
ನಿತೀಶ್ ಕುಮಾರ್ ಅವರು ಈಗಾಗಲೇ ಪಾಟ್ನಾದ ಮುಖ್ಯಮಂತ್ರಿ ಅಧಿಕೃತ ನಿವಾಸದಿಂದ ತಮ್ಮ ವೈಯಕ್ತಿಕ ವಸ್ತುಗಳನ್ನು ಸ್ಥಳಾಂತರಿಸಲು ಪ್ರಾರಂಭಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.








