ಪಾಟ್ನಾ: ಬಿಹಾರದಲ್ಲಿ ಸುದೀರ್ಘ ಕಾಲ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನಿತೀಶ್ ಕುಮಾರ್ ಅವರ ಅಧಿಕಾರಾವಧಿ ಅಂತ್ಯಗೊಳ್ಳುತ್ತಿದ್ದು, ರಾಜ್ಯದಲ್ಲಿ ಹೊಸ ನಾಯಕನ ಪಟ್ಟಾಭಿಷೇಕಕ್ಕೆ ವೇದಿಕೆ ಸಿದ್ಧವಾಗಿದೆ. ಏಪ್ರಿಲ್ 14ರಂದು ಬೆಳಿಗ್ಗೆ 11 ಗಂಟೆಗೆ ನಿತೀಶ್ ಕುಮಾರ್ ಅವರು ತಮ್ಮ ಕೊನೆಯ ಸಚಿವ ಸಂಪುಟ ಸಭೆಯನ್ನು ನಡೆಸಲಿದ್ದು, ಅದರ ಬೆನ್ನಲ್ಲೇ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸುವ ಸಾಧ್ಯತೆಯಿದೆ.
ರಾಜ್ಯಸಭೆಗೆ ಆಯ್ಕೆಯಾಗಿರುವ ನಿತೀಶ್ ಕುಮಾರ್ ಅವರು ರಾಷ್ಟ್ರ ರಾಜಕಾರಣಕ್ಕೆ ತೆರಳುತ್ತಿರುವುದರಿಂದ ಬಿಹಾರದ ಮುಂದಿನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುತೂಹಲ ಇಡೀ ದೇಶದ ಗಮನ ಸೆಳೆದಿದೆ.
ಬಿಜೆಪಿ ನೇತೃತ್ವದ ಸರ್ಕಾರ ರಚನೆಯಾಗುವುದು ಬಹುತೇಕ ಖಚಿತವಾಗಿದ್ದು, ಈ ಕೆಳಗಿನ ಹೆಸರುಗಳು ಮುಂಚೂಣಿಯಲ್ಲಿವೆ:
ಸಾಮ್ರಾಟ್ ಚೌಧರಿ: ಪ್ರಸ್ತುತ ಉಪಮುಖ್ಯಮಂತ್ರಿಯಾಗಿರುವ ಸಾಮ್ರಾಟ್ ಚೌಧರಿ ಅವರು ಸಿಎಂ ಸ್ಥಾನಕ್ಕೆ ಪ್ರಬಲ ಅಭ್ಯರ್ಥಿಯಾಗಿದ್ದಾರೆ. ನಿತೀಶ್ ಕುಮಾರ್ ಕೂಡ ಈ ಹಿಂದೆ ಇವರ ಹೆಸರನ್ನು ಸೂಚ್ಯವಾಗಿ ಪ್ರಸ್ತಾಪಿಸಿದ್ದರು.
ಕೇಂದ್ರ ಗೃಹ ಖಾತೆ ರಾಜ್ಯ ಸಚಿವರಾಗಿರುವ ನಿತ್ಯಾನಂದ ರೈ ಅವರ ಹೆಸರೂ ಕೇಳಿಬರುತ್ತಿದೆ.ಎಸ್ಸಿ/ಎಸ್ಟಿ ಕಲ್ಯಾಣ ಸಚಿವರಾಗಿರುವ ಲಖೇಂದ್ರ ಪಾಸ್ವಾನ್ ಅವರ ಹೆಸರು ಕೂಡ ಅಚ್ಚರಿಯ ಆಯ್ಕೆಯಾಗಿ ಹೊರಹೊಮ್ಮುವ ಸಾಧ್ಯತೆಯಿದೆ.ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರು ಹೊಸ ಸಚಿವ ಸಂಪುಟ ಸೇರುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಪ್ರವೇಶಿಸಲಿದ್ದಾರೆ ಎಂಬ ಚರ್ಚೆಗಳು ನಡೆಯುತ್ತಿವೆ.








