ನವದೆಹಲಿ: ಪರಿಸರ ಸ್ನೇಹಿ ಬಟ್ಟೆಯ ಕೈ ಚೀಲಗಳನ್ನು ಖರೀದಿಸುವ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ.ಗಳ ಅಕ್ರಮ ಎಸಗಿದ ಆರೋಪದಲ್ಲಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆ ನಡೆಸಲು ಪೂರ್ವಾನುಮತಿ ನೀಡಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶಿಸಿದ್ದ ಹೈಕೋರ್ಟ್ ಆದೇಶಕ್ಕೆ ಸೋಮವಾರ ಸುಪ್ರೀಂಕೋರ್ಟ್ ತಡೆ ನೀಡಿದೆ.
ರೋಹಿಣಿ ಅವರು ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರ ಹಾಗೂ ಎನ್.ಆರ್. ರವಿಚಂದ್ರೇಗೌಡ ಅವರಿಗೆ ನೋಟಿಸ್ ನೀಡಿದೆ. ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಮೈಸೂರು ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸಲು ಬಟ್ಟೆಯ ಕೈಚೀಲಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಿರ್ದೇಶಿಸಿದ್ದರು. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ 7.65 ಕೋಟಿ ರೂ.ಗಳಷ್ಟು ನಷ್ಟ ಉಂಟು ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು.
ಪ್ರಕರಣದ ಹಿನ್ನೆಲೆ?
ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಮುಕ್ತಗೊಳಿಸುವ ನಿಟ್ಟಿನಲ್ಲಿ ಬಟ್ಟೆಯ ಕೈಚೀಲಗಳನ್ನು ಬಳಸಬೇಕು ಎಂದು ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ನಗರ, ಗ್ರಾಮಾಂತರ ಮತ್ತು ಸ್ಥಳೀಯ ಸಂಸ್ಥೆಗಳಿಗೆ ನಿರ್ದೇಶಿಸಿದ್ದರು. ಅದರ ಮುಂದುವರೆದ ಭಾಗವಾಗಿ ಮುಕ್ತ ಮಾರುಕಟ್ಟೆಯಲ್ಲಿ 13 ರು.ಗಳಿದ್ದ ಚೀಲಕ್ಕೆ 52ರಷ್ಟು ದರ ನೀಡಿ ಖರೀದಿಸಲಾಗಿದೆ. ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ 7,65,15,816 ಕೋಟಿ ನಷ್ಟು ಉಂಟು ಮಾಡಲಾಗಿದೆ.
ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಪ್ರಯೋಜನ ನೀಡುವ ಉದ್ದೇಶದಿಂದ ಕಲ್ಯಾಣ ಯೋಜನೆಗಳಿಗೆ ಮೀಸಲಿಟ್ಟ ಹಣವನ್ನು ಈ ಕೈಚೀಲಗಳ ಖರೀದಿಗೆ ಬಳಸಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದರು. ಈ ಆರೋಪ ಸಂಬಂಧ ಭ್ರಷ್ಟಾಚಾರ ನಿಗ್ರಹ ಕಾಯ್ದೆ–1988ರ ಅಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸುವ ಬಗ್ಗೆ ಅರ್ಜಿದಾರರು 2021ರ ಅಕ್ಟೋಬರ್ 13ರಂದು ಮೈಸೂರು ಜಿಲ್ಲಾ ಭ್ರಷ್ಟಚಾರ ನಿಗ್ರಹ ದಳಕ್ಕೆ (ಎಸಿಬಿ) ದೂರು ನೀಡಿದ್ದರು. ದೂರಿನ ಸಂಬಂಧ ತನಿಖೆಗೆ ಅನುಮತಿ ನೀಡದ ಕ್ರಮವನ್ನು ಪ್ರಶ್ನಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.








