ಬೆಂಗಳೂರು : ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ ಸಭೆಯಲ್ಲಿ 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಸಿಎಂ ಸಿದ್ದರಾಮಯ್ಯ ಅನುಮೋದನೆ ನೀಡಿದರು. ಒಟ್ಟು 18,430.44 ಕೋಟಿ ರೂ. ಮೊತ್ತದ ಬಂಡವಾಳ ಹೂಡಿಕೆ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಸುಮಾರು 15,032 ಜನರಿಗೆ ಉದ್ಯೋಗ ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ.
ಗೃಹಕಚೇರಿ ಕೃಷ್ಣಾದಲ್ಲಿ ನಿನ್ನೆ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ 67ನೇ ಸಭೆಯ ಅಧ್ಯಕ್ಷತೆ ವಹಿಸಿದ್ದ ಮುಖ್ಯಮಂತ್ರಿಗಳು, 11 ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು ಹಾಗೂ 6 ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳೂ ಸೇರಿದಂತೆ ಒಟ್ಟು 17 ಯೋಜನಾ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು.
11 ಹೊಸ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಟ್ಟು 14,906.9 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 13,050 ಉದ್ಯೋಗ ಸೃಷ್ಠಿಯಾಗಲಿದೆ. 6 ಹೆಚ್ಚುವರಿ ಬಂಡವಾಳ ಪ್ರಸ್ತಾವನೆಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಿಗೆ ಒಟ್ಟು 3,523.54 ಕೋಟಿಗಳ ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 1,982 ಉದ್ಯೋಗ ಸೃಷ್ಟಿಯಾಗುತ್ತಿರುವುದಾಗಿ ತಿಳಿಸಿದರು.








