ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳಿಗೆ ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ತಡೆ ನೀಡಿದ್ದು, ಅಂಕಗಳನ್ನೇ ನೀಡುವಂತೆ ಮಹತ್ವದ ನಿರ್ದೇಶನ ನೀಡಿದೆ.
2025-26ನೇ ಸಾಲಿನಿಂದ ತೃತೀಯ ಭಾಷೆಗಳಿಗೆ ಅಂಕಗಳ ಬದಲಾಗಿ ಗ್ರೇಡ್ ನೀಡಲಾಗುವುದು ಎಂಬ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಚಿಕ್ಕಮಗಳೂರಿನ ಸಹನಾ ಆರ್. ನಾಯ್ಕ್ ಸೇರಿದಂತೆ ಮೂವರು ವಿದ್ಯಾರ್ಥಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಏಕಸದಸ್ಯ ಪೀಠವು ಈ ಮಹತ್ವದ ತೀರ್ಪು ಪ್ರಕಟಿಸಿದೆ.
ವಿದ್ಯಾರ್ಥಿಗಳ ಪರ ವಾದವೇನು?
ಅರ್ಜಿದಾರರ ಪರ ವಕೀಲರಾದ ಆರ್.ವಿ. ನಾಯ್ಕ್ ಅವರು ನ್ಯಾಯಾಲಯದಲ್ಲಿ ಪ್ರಬಲ ವಾದ ಮಂಡಿಸಿದ್ದಾರೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯು ಈ ಹಿಂದೆ ಹೊರಡಿಸಿದ ಮಾರ್ಗಸೂಚಿಯಂತೆ ತೃತೀಯ ಭಾಷೆಗೆ ಒಟ್ಟು 100 ಅಂಕಗಳನ್ನು (80 ಲಿಖಿತ + 20 ಆಂತರಿಕ) ನಿಗದಿಪಡಿಸಲಾಗಿತ್ತು. ಆದರೆ, ಕೊನೆ ಹಂತದಲ್ಲಿ ಸರ್ಕಾರ ಗ್ರೇಡಿಂಗ್ ಪದ್ಧತಿ ತರಲು ಮುಂದಾಗಿದೆ.
ಉದ್ಯೋಗದ ಮೇಲೆ ಪರಿಣಾಮ
ಯುಪಿಎಸ್ಸಿ, ಬ್ಯಾಂಕಿಂಗ್ ಮತ್ತು ಕೇಂದ್ರ ಸರ್ಕಾರದ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇವಲ ಅಂಕಗಳನ್ನು ಮಾತ್ರ ಪರಿಗಣಿಸಲಾಗುತ್ತದೆ. ಗ್ರೇಡಿಂಗ್ ವ್ಯವಸ್ಥೆಯಿಂದ ರಾಜ್ಯದ ವಿದ್ಯಾರ್ಥಿಗಳಿಗೆ ಭವಿಷ್ಯದ ಉದ್ಯೋಗಾವಕಾಶಗಳಲ್ಲಿ ಹಿನ್ನಡೆಯಾಗುವ ಸಾಧ್ಯತೆಯಿದೆ.
ನ್ಯಾಯಾಲಯದ ನಿರ್ದೇಶನ
ಈ ವಾದವನ್ನು ಆಲಿಸಿದ ನ್ಯಾಯಪೀಠವು, ರಾಜ್ಯ ಸರ್ಕಾರವು ತೃತೀಯ ಭಾಷೆಗಳಿಗೆ ಸಂಬಂಧಿಸಿದಂತೆ ಗ್ರೇಡಿಂಗ್ ನೀಡುವ ಬಗ್ಗೆ ಯಾವುದೇ ಅಧಿಕೃತ ನೋಟಿಫಿಕೇಷನ್ ಹೊರಡಿಸಿದೆಯೇ ಎಂದು ಪ್ರಶ್ನಿಸಿತು. ಅಂತಿಮವಾಗಿ, ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಹಿಂದಿ ಸೇರಿದಂತೆ ತೃತೀಯ ಭಾಷೆಗಳ ಪರೀಕ್ಷೆಯಲ್ಲಿ ಅಂಕಗಳನ್ನೇ ನೀಡುವಂತೆ ಸರ್ಕಾರ ಹಾಗೂ ಮಂಡಳಿಗೆ ಸೂಚಿಸಿ ಅರ್ಜಿ ಇತ್ಯರ್ಥಪಡಿಸಿತು.
ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಮುಖ್ಯ ನ್ಯಾಯಮೂರ್ತಿಗಳ ಪೀಠವು ಇತ್ತೀಚೆಗೆ ರದ್ದುಪಡಿಸಿತ್ತು. ಆದರೆ, ವಿದ್ಯಾರ್ಥಿಗಳು ವೈಯಕ್ತಿಕವಾಗಿ ಸಲ್ಲಿಸಿದ ಅರ್ಜಿಯನ್ನು ಪುರಸ್ಕರಿಸಿದ ಏಕಸದಸ್ಯ ಪೀಠವು ಈಗ ಅಂಕ ನೀಡುವಂತೆ ಆದೇಶಿಸಿದೆ.








