ಘಾಜಿಯಾಬಾದ್: ಉತ್ತರ ಪ್ರದೇಶದ ಘಾಜಿಯಾಬಾದ್ ಸಮೀಪದ ದೆಹಲಿ-ಮೀರಟ್ ಎಕ್ಸ್ಪ್ರೆಸ್ವೇನಲ್ಲಿ ಶುಕ್ರವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ವೇಗವಾಗಿ ಬಂದ ಟೆಂಪೋ ಟ್ರಾವೆಲರ್ ಒಂದು, ರಸ್ತೆಯ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಥಾರ್ ಜೀಪ್ ಮತ್ತು ಮೋಟರ್ಸೈಕಲ್ಗೆ ಬಲವಾಗಿ ಡಿಕ್ಕಿ ಹೊಡೆದಿದ್ದೇ ಈ ದುರಂತಕ್ಕೆ ಕಾರಣವಾಗಿದೆ.
ಘಾಜಿಯಾಬಾದ್ನ ಐಪಿಇಎಂ ಕಾಲೇಜು ಎಕ್ಸಿಟ್ ಬಳಿ ಈ ಅಪಘಾತ ಸಂಭವಿಸಿದೆ. ಎಕ್ಸ್ಪ್ರೆಸ್ವೇ ಪಕ್ಕದಲ್ಲಿ ಥಾರ್ ಜೀಪ್ ಮತ್ತು ಬೈಕ್ ನಿಲ್ಲಿಸಿ ಸವಾರರು ನಿಂತಿದ್ದಾಗ, ಅತಿ ವೇಗವಾಗಿ ಬಂದ ಟೆಂಪೋ ಟ್ರಾವೆಲರ್ ಬಸ್ ನಿಯಂತ್ರಣ ತಪ್ಪಿ ನೇರವಾಗಿ ಅವರಿಗೆ ಗುದ್ದಿದೆ.
ಡಿಕ್ಕಿಯ ರಭಸಕ್ಕೆ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮತ್ತೊಬ್ಬ ವ್ಯಕ್ತಿಯನ್ನು ಕೂಡಲೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯೇ ಅಪಘಾತಕ್ಕೆ ಪ್ರಾಥಮಿಕ ಕಾರಣ ಎನ್ನಲಾಗಿದೆ. ಡಿಕ್ಕಿ ಹೊಡೆದ ನಂತರ ಟೆಂಪೋ ಟ್ರಾವೆಲರ್ ಹಾನಿಗೊಳಗಾಗಿದ್ದು, ಪೊಲೀಸರು ವಾಹನವನ್ನು ವಶಕ್ಕೆ ಪಡೆದಿದ್ದಾರೆ.
ಅಪಘಾತದ ಹಿನ್ನೆಲೆಯಲ್ಲಿ ಎಕ್ಸ್ಪ್ರೆಸ್ವೇನಲ್ಲಿ ಕೆಲಕಾಲ ಸಂಚಾರ ವ್ಯತ್ಯಯ ಉಂಟಾಗಿತ್ತು. ಘಾಜಿಯಾಬಾದ್ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಮತ್ತು ಸಂಚಾರವನ್ನು ಸುಗಮಗೊಳಿಸಿದ್ದಾರೆ.








