ಶಿವಮೊಗ್ಗ: “ಬಸವಾದಿ ಶರಣರ ಆದರ್ಶ ಹಾಗೂ ತತ್ವಗಳನ್ನು ಪಾಲಿಸಿಕೊಂಡು ಬರುತ್ತಿರುವ ಲಿಂಗಾಯತ ಸಮಾಜವು ಊರಿನ ಸಮಗ್ರ ಅಭಿವೃದ್ಧಿಗೆ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ಇಂತಹ ಸಮಾಜದ ಸರ್ವತೋಮುಖ ಪ್ರಗತಿಗೆ ಅಗತ್ಯವಿರುವ ಎಲ್ಲಾ ಸಹಕಾರವನ್ನು ನೀಡಲಾಗುವುದು” ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ವೀರಶೈವ ಸಮಾಜದ ವತಿಯಿಂದ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಸಂಕೀರ್ಣವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಹಿಂದುಳಿದವರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನ ಶ್ಲಾಘನೀಯ:
ಸಮಾಜದ ಏಳಿಗೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಕರೆ ನೀಡಿದ ಶಾಸಕರು, “ವೀರಶೈವ ಸಮಾಜ ಆರ್ಥಿಕವಾಗಿ ಸದೃಢವಾಗಿದ್ದರೂ, ಸಮಾಜದೊಳಗಿರುವ ಆರ್ಥಿಕವಾಗಿ ಹಿಂದುಳಿದವರನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯ. ಇಂತಹ ವಾಣಿಜ್ಯ ಸಂಕೀರ್ಣಗಳಿಂದ ಸ್ಥಳೀಯವಾಗಿ ಉದ್ಯೋಗಗಳು ಸೃಷ್ಟಿಯಾಗುತ್ತವೆ. ಸಮಾಜದ ಕಲ್ಯಾಣ ಮಂಟಪಕ್ಕೆ ಆರ್ಥಿಕ ನೆರವು ನೀಡುವುದರ ಜೊತೆಗೆ, ಶಿಥಿಲಾವಸ್ಥೆಯಲ್ಲಿರುವ ವೀರೇಶ್ವರ ದೇವಸ್ಥಾನದ ಪುನರ್ ನಿರ್ಮಾಣಕ್ಕೆ ಕೂಡಲೇ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.
ಸಮಾಜದ ಸದೃಢತೆಗೆ ಮಾರುಕಟ್ಟೆ ಸಂಕೀರ್ಣ ಪೂರಕ: ಹರತಾಳು ಹಾಲಪ್ಪ
ಮಾಜಿ ಸಚಿವ ಹರತಾಳು ಹಾಲಪ್ಪ ಮಾತನಾಡಿ, “ಪಟ್ಟಣದ ಮಧ್ಯಭಾಗದಲ್ಲಿ ಸುಸಜ್ಜಿತ ವಾಣಿಜ್ಯ ಸಂಕೀರ್ಣ ನಿರ್ಮಾಣ ಮಾಡಿರುವುದು ಸಾಗರವನ್ನು ಆರ್ಥಿಕವಾಗಿ ಸದೃಢಗೊಳಿಸಲು ಸಹಕಾರಿಯಾಗಿದೆ. ಮಠ-ಮಂದಿರಗಳಿಗೆ ಅನುದಾನ ನೀಡುವ ಕಾರ್ಯ ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿದ್ದ ಕಾಲದಿಂದ ವೇಗ ಪಡೆದುಕೊಂಡಿತು. ನನ್ನ ಅವಧಿಯಲ್ಲೂ ಕೆಂಜಿಗಾಪುರ ಮತ್ತು ರಿಪ್ಪನಪೇಟೆಯ ಶಿವಮಂದಿರಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದ್ದೇನೆ. ಸರ್ಕಾರ ಮತ್ತು ಜನಪ್ರತಿನಿಧಿಗಳು ಇಂತಹ ಸಮಾಜಮುಖಿ ಕಾರ್ಯಗಳಿಗೆ ಸದಾ ಬೆಂಬಲ ನೀಡಬೇಕು” ಎಂದರು.
ಸಂಘಟನೆಯಿಂದ ಅಸಾಧ್ಯವಾದುದು ಯಾವುದೂ ಇಲ್ಲ: ಶ್ರೀಗಳು
ಕಾರ್ಯಕ್ರಮದ ಸಾನಿಧ್ಯ ವಹಿಸಿದ್ದ ಮುರುಘಾಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ಆಶೀರ್ವಚನ ನೀಡಿ, “ವೀರಶೈವ ಸಮಾಜವು ಶಿಕ್ಷಣ ಮತ್ತು ದಾಸೋಹದ ಜೊತೆಗೆ ಸಾಮಾಜಿಕ ಕಳಕಳಿಯ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದೆ. ಸಮಾಜ ಬಾಂಧವರು ಸಂಘಟಿತರಾದರೆ ಅಸಾಧ್ಯವಾದದ್ದನ್ನು ಸಾಧಿಸಬಹುದು ಎಂಬುದಕ್ಕೆ ಈ ಸುಂದರ ಕಟ್ಟಡವೇ ಸಾಕ್ಷಿ” ಎಂದು ಹಿತವಚನ ನೀಡಿದರು.
ಗಣ್ಯರ ಉಪಸ್ಥಿತಿ
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವೀರಶೈವ ಸಮಾಜದ ಅಧ್ಯಕ್ಷ ಬಸವರಾಜ ಜಿ.ಎಸ್. ವಹಿಸಿದ್ದರು. ವೇದಿಕೆಯಲ್ಲಿ ನಗರಸಭೆ ಮಾಜಿ ಅಧ್ಯಕ್ಷ ಟಿ.ಡಿ. ಮೇಘರಾಜ್, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ, ಪ್ರಮುಖರಾದ ಕೆ.ಎಚ್. ಜ್ಞಾನೇಶ್ವರಪ್ಪ, ದಿನೇಶ್ ಬರದವಳ್ಳಿ, ಅನಿಲ್ ಗೌಡ ಸೇರಿದಂತೆ ಸಮಾಜದ ಹಿರಿಯರು ಮತ್ತು ಮುಖಂಡರು ಉಪಸ್ಥಿತರಿದ್ದರು.
ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..
ಸಾಗರ ಪಟ್ಟಣದ ಅಭಿವೃದ್ಧಿಗೆ ₹7 ಕೋಟಿ ಮೀಸಲು: ಶಾಸಕ ಗೋಪಾಲಕೃಷ್ಣ ಬೇಳೂರು ಭರವಸೆ
BREAKING: ‘ಡಿಸಿ ಬರುವವರೆಗೆ ಇಳಿಯಲ್ಲ’ ಎಂದು 9ನೇ ಅಂತಸ್ತಿನ ಕಟ್ಟಡ ಏರಿ ಯುವಕನ ಆತ್ಮಹತ್ಯೆ ಬೆದರಿಕೆ








