ಜಕಾರ್ತ: ಇಂಡೋನೇಷ್ಯಾದಲ್ಲಿ ಸಂಭವಿಸಿದ ಭೀಕರ ಲೋಕಲ್ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಿಂದ ನಡೆಯುತ್ತಿದ್ದ ಸುದೀರ್ಘ ರಕ್ಷಣಾ ಕಾರ್ಯಾಚರಣೆ ಇದೀಗ ಪೂರ್ಣಗೊಂಡಿದ್ದು, ಹಳಿ ತಪ್ಪಿದ ಬೋಗಿಗಳಿಂದ ಎಲ್ಲಾ ಪ್ರಯಾಣಿಕರನ್ನು ಹೊರತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜನದಟ್ಟಣೆಯಿಂದ ಕೂಡಿದ್ದ ಪ್ರಯಾಣಿಕರ ರೈಲೊಂದು ತಾಂತ್ರಿಕ ದೋಷದಿಂದಾಗಿ ಹಳಿ ತಪ್ಪಿ ಪಕ್ಕದಲ್ಲೇ ಇದ್ದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಎರಡು ಬೋಗಿಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಪತರುಗುಟ್ಟಿದ್ದರು.
ಘಟನಾ ಸ್ಥಳದಲ್ಲಿಯೇ 10 ಮಂದಿ ಮೃತಪಟ್ಟಿದ್ದರೆ, ಆಸ್ಪತ್ರೆಗೆ ದಾಖಲಾದವರ ಪೈಕಿ ಐವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇದರಿಂದ ಒಟ್ಟು ಸಾವಿನ ಸಂಖ್ಯೆ 15ಕ್ಕೆ ತಲುಪಿದೆ.
ಸುಮಾರು 40ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರಲ್ಲಿ 10 ಜನರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ನೂರಾರು ರಕ್ಷಣಾ ಸಿಬ್ಬಂದಿಗಳು ಗ್ಯಾಸ್ ಕಟ್ಟರ್‌ಗಳನ್ನು ಬಳಸಿ ಬೋಗಿಗಳನ್ನು ತುಂಡರಿಸಿ ಸಿಲುಕಿಕೊಂಡಿದ್ದವರನ್ನು ರಕ್ಷಿಸಿದ್ದಾರೆ. ಪ್ರಸ್ತುತ ರೈಲ್ವೆ ಹಳಿಗಳನ್ನು ಸ್ವಚ್ಛಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ.








