ಮೈಸೂರು: ಪತಿಯೊಬ್ಬ ಆಕೆಯನ್ನು ಕೊಡಲಿಯಿಂದ ಕೊಚ್ಚಿ ಪತ್ನಿಯನ್ನು ಅಮಾನವೀಯವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಹಳೆ ಕೆಸರೆ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು 24 ವರ್ಷದ ಪುಷ್ಪ ಎಂದು ಗುರುತಿಸಲಾಗಿದೆ. ಇವರು ಮೈಸೂರಿನ ದೇವರಾಜ ಅರಸು ರಸ್ತೆಯ ಖಾಸಗಿ ಬಟ್ಟೆ ಮಳಿಗೆಯೊಂದರಲ್ಲಿ ಉದ್ಯೋಗಿಯಾಗಿದ್ದರು. ಪತ್ನಿ ಕೆಲಸ ಮುಗಿಸಿ ಮನೆಗೆ ಬರುವುದು ತಡವಾಗುತ್ತಿದೆ ಎಂಬ ಕಾರಣಕ್ಕೆ ಪತಿ ಮಹೇಶ್ ನಿರಂತರವಾಗಿ ಜಗಳವಾಡುತ್ತಿದ್ದ ಎನ್ನಲಾಗಿದೆ.
ಬುಧವಾರ ರಾತ್ರಿ ಎಂದಿನಂತೆ ದಂಪತಿಗಳ ನಡುವೆ ತಡವಾಗಿ ಬರುವ ವಿಚಾರವಾಗಿ ತೀವ್ರ ಮಾತಿನ ಚಕಮಕಿ ನಡೆದಿದೆ. ಗಲಾಟೆ ವಿಕೋಪಕ್ಕೆ ಹೋದಾಗ ಆಕ್ರೋಶಗೊಂಡ ಮಹೇಶ್, ಮನೆಯಲ್ಲಿದ್ದ ಕೊಡಲಿಯಿಂದ ಪುಷ್ಪ ಅವರ ತಲೆಗೆ ಬಲವಾಗಿ ಹೊಡೆದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಪತ್ನಿ ಸಾಯುವುದನ್ನು ಖಚಿತಪಡಿಸಿಕೊಳ್ಳಲು, ನಂತರ ದಿಂಬಿನಿಂದ ಮುಖವನ್ನು ಒತ್ತಿ ಹಿಡಿದು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಪೊಲೀಸರಿಗೆ ಶರಣಾದ ಆರೋಪಿ
ಕೃತ್ಯವೆಸಗಿದ ನಂತರ ಮಹೇಶ್ ನೇರವಾಗಿ ಎನ್.ಆರ್. ಮೊಹಲ್ಲಾ ಪೊಲೀಸ್ ಠಾಣೆಗೆ ತೆರಳಿ ತನ್ನ ತಪ್ಪನ್ನು ಒಪ್ಪಿಕೊಂಡು ಶರಣಾಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.








