ಬೆಂಗಳೂರು: ಏಪ್ರಿಲ್ 30, 2026 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ, ಶಿಕ್ಷಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಕಾನೂನು ಸಚಿವ ಹೆಚ್.ಕೆ. ಪಾಟೀಲ್ ಅವರು ಈ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರದ ಈ ನಿರ್ಧಾರಗಳು ಸಾರ್ವಜನಿಕರ ಮೂಲಸೌಕರ್ಯ ಹಾಗೂ ಕಲ್ಯಾಣಕ್ಕೆ ಹೆಚ್ಚು ಒತ್ತು ನೀಡಿವೆ.
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ಹೊಸ ಬಸ್‌ಗಳನ್ನು ಖರೀದಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಒಟ್ಟು 80 ಹೊಸ ಬಸ್‌ಗಳನ್ನು ಖರೀದಿಸಲು ನಿರ್ಧರಿಸಲಾಗಿದ್ದು, ಈ ಯೋಜನೆಗೆ ಅಂದಾಜು 32 ಕೋಟಿ ರೂಪಾಯಿಗಳ ವೆಚ್ಚವಾಗಲಿದೆ. ಇದರಿಂದ ಈ ಭಾಗದ ಪ್ರಯಾಣಿಕರಿಗೆ ಮತ್ತಷ್ಟು ಸುಲಭ ಹಾಗೂ ಉತ್ತಮ ಸಾರಿಗೆ ಸೌಲಭ್ಯ ದೊರೆಯಲಿದೆ.
ಇದರ ಜೊತೆಗೆ, ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸರ್ಕಾರ ಮಹತ್ವದ ನೆರವನ್ನು ಘೋಷಿಸಿದೆ. ಒಂದರಿಂದ ಹನ್ನೆರಡನೇ ತರಗತಿಯವರೆಗೆ ಓದುತ್ತಿರುವ ನೋಂದಾಯಿತ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಪುಸ್ತಕ ಹಾಗೂ ಅಗತ್ಯ ಲೇಖನ ಸಾಮಗ್ರಿಗಳನ್ನು ಒಳಗೊಂಡ ಶೈಕ್ಷಣಿಕ ಕಿಟ್‌ಗಳನ್ನು ವಿತರಿಸಲು ಸಂಪುಟ ಸಮ್ಮತಿ ಸೂಚಿಸಿದೆ. ತಲಾ 8,600 ರೂಪಾಯಿ ಮೌಲ್ಯದ ಈ ಕಿಟ್‌ಗಳ ವಿತರಣೆಗಾಗಿ ಒಟ್ಟು 115.84 ಕೋಟಿ ರೂಪಾಯಿ ಮೊತ್ತದ ಅನುದಾನಕ್ಕೆ ಸರ್ಕಾರ ಅನುಮೋದನೆ ನೀಡಿದೆ.
ಅಲ್ಲದೆ, ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿ ಹಾಗೂ ಮೂಲಸೌಕರ್ಯಗಳಿಗಾಗಿ ಬೃಹತ್ ಅನುದಾನವನ್ನು ಬಿಡುಗಡೆ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಅಲ್ಪಸಂಖ್ಯಾತರು ಹೆಚ್ಚಾಗಿ ವಾಸಿಸುವ ಕಾಲೋನಿಗಳು ಹಾಗೂ ಕೇರಿಗಳಲ್ಲಿ ಮೂಲಸೌಕರ್ಯಗಳನ್ನು ಒದಗಿಸಲು ಬರೋಬ್ಬರಿ 600 ಕೋಟಿ ರೂಪಾಯಿ ಕ್ರಿಯಾ ಯೋಜನೆಗೆ ಸರ್ಕಾರದ ಸಮ್ಮತಿ ದೊರೆತಿದೆ. ಈ ಅನುದಾನದ ಮೂಲಕ ಶೀಘ್ರವೇ ಅಭಿವೃದ್ಧಿ ಕಾಮಗಾರಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದ್ದು, ಅಲ್ಪಸಂಖ್ಯಾತ ಸಮುದಾಯದ ಮೂಲಭೂತ ಅಗತ್ಯಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಲಾಗಿದೆ.







