ನವದೆಹಲಿ:ವಾಣಿಜ್ಯ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾದ ಬೆನ್ನಲ್ಲೇ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಂದಿನ ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳೂ ಸಹ ಜನಸಾಮಾನ್ಯರಿಗೆ ಶಾಕ್ ನೀಡಲಿವೆ ಎಂದು ಭವಿಷ್ಯ ನುಡಿದಿದ್ದಾರೆ.
ಇಂದು ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾದ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಸರ್ಕಾರದ ಬೆಲೆ ಏರಿಕೆ ನೀತಿಯನ್ನು ತೀವ್ರವಾಗಿ ಟೀಕಿಸಿದ್ದಾರೆ. “ಮೊದಲು ಗ್ಯಾಸ್ ಬೆಲೆ ಏರಿಸಲಾಗಿದೆ, ಈಗ ಮುಂದಿನ ಸರದಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ದಾಳಿಯಾಗಿದೆ” ಎಂದು ಅವರು ಹೇಳಿದ್ದಾರೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಏರಿಕೆಯಿಂದಾಗಿ ಹೋಟೆಲ್ ಮತ್ತು ಆಹಾರ ಪದಾರ್ಥಗಳ ಬೆಲೆ ಹೆಚ್ಚಾಗಲಿದ್ದು, ಇದು ಪರೋಕ್ಷವಾಗಿ ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕಲಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಚುನಾವಣೆಗಳು ಮುಗಿಯುತ್ತಿದ್ದಂತೆಯೇ ಸರ್ಕಾರವು ತೈಲ ಕಂಪನಿಗಳಿಗೆ ಬೆಲೆ ಏರಿಸಲು ಮುಕ್ತ ಅವಕಾಶ ನೀಡುತ್ತಿದೆ. ಬೆಲೆ ಏರಿಕೆಯ ಈ ಸರಣಿ ಈಗಷ್ಟೇ ಆರಂಭವಾಗಿದ್ದು, ಶೀಘ್ರದಲ್ಲೇ ವಾಹನ ಸವಾರರಿಗೂ ಬಿಸಿ ತಟ್ಟಲಿದೆ ಎಂದು ಅವರು ಎಚ್ಚರಿಸಿದ್ದಾರೆ.








