ಬೆಂಗಳೂರು: ಶ್ರೀಕ್ಷೇತ್ರ ಧರ್ಮಸ್ಥಳದ ಬಗ್ಗೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಹಾಗೂ ಮಹಿಳೆಯರ ಘನತೆಗೆ ಕುಂದುಂಟು ಮಾಡುವಂತಹ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಗಿರೀಶ್ ಮಟ್ಟಣ್ಣನವರ್ ವಿರುದ್ಧ ಬೆಂಗಳೂರಿನ ಸುಬ್ರಮಣ್ಯ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ.
ಕಳೆದ ಡಿಸೆಂಬರ್ 4, 2023 ರಂದು ಉಜಿರೆಯಲ್ಲಿ ನಡೆದ ‘ಜನಾಂದೋಲನ’ ಕಾರ್ಯಕ್ರಮದಲ್ಲಿ ಗಿರೀಶ್ ಮಟ್ಟಣ್ಣನವರ್ ಭಾಷಣ ಮಾಡಿದ್ದರು. ಈ ಭಾಷಣದ ತುಣುಕನ್ನೊಳಗೊಂಡ ವಿಡಿಯೋವನ್ನು ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದರಲ್ಲಿ ಪ್ರಸಾರ ಮಾಡಲಾಗಿತ್ತು. ಈ ವಿಡಿಯೋದಲ್ಲಿ ಧರ್ಮಸ್ಥಳ ಕ್ಷೇತ್ರ ಹಾಗೂ ಅಲ್ಲಿ ವಿವಾಹವಾಗುವ ಮಹಿಳೆಯರ ಕುರಿತು ಅತ್ಯಂತ ಕೆಳಮಟ್ಟದ ಮತ್ತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾವೇರಿ ಎಂಬುವವರು ನೀಡಿದ ದೂರಿನನ್ವಯ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಕ್ಷೇತ್ರದ ಪಾವಿತ್ರ್ಯತೆಗೆ ಧಕ್ಕೆ ತರುವಂತಹ ಮಾತುಗಳನ್ನು ಆಡಲಾಗಿದೆ. ಧರ್ಮಸ್ಥಳದಲ್ಲಿ ಮದುವೆಯಾಗುವ ಮಹಿಳೆಯರ ಘನತೆಯನ್ನು ಪ್ರಶ್ನಿಸುವ ಮೂಲಕ ಸ್ತ್ರೀ ಕುಲಕ್ಕೆ ಅಪಮಾನ ಮಾಡಲಾಗಿದೆ. ಸಮಾಜದಲ್ಲಿ ಶಾಂತಿ ಕದಡುವ ಮತ್ತು ವಿವಿಧ ಸಮುದಾಯಗಳ ನಡುವೆ ದ್ವೇಷ ಬಿತ್ತುವ ಪ್ರಯತ್ನ ಮಾಡಲಾಗಿದೆ.
ಸಾರ್ವಜನಿಕ ಆಕ್ರೋಶ:
ಈ ಹೇಳಿಕೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. “ಯಾವುದೇ ವ್ಯಕ್ತಿ ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಿನಲ್ಲಿ ಧಾರ್ಮಿಕ ಕೇಂದ್ರಗಳ ಹಾಗೂ ಮಹಿಳೆಯರ ಗೌರವಕ್ಕೆ ಧಕ್ಕೆ ತರಬಾರದು. ನಾಗರಿಕ ಸಮಾಜದಲ್ಲಿ ಇಂತಹ ಬೇಜವಾಬ್ದಾರಿ ಹೇಳಿಕೆಗಳಿಗೆ ಜಾಗವಿಲ್ಲ” ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.
ಪೊಲೀಸ್ ಕ್ರಮ: ಸದ್ಯ ಸುಬ್ರಮಣ್ಯ ನಗರ ಪೊಲೀಸರು ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆಯನ್ನು ತೀವ್ರಗೊಳಿಸಿದ್ದಾರೆ. ವಿಡಿಯೋದ ಮೂಲ ಮತ್ತು ಉದ್ದೇಶದ ಬಗ್ಗೆ ಹೆಚ್ಚಿನ ಮಾಹಿತಿ ಕಲೆಹಾಕುತ್ತಿದ್ದಾರೆ.








