ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ವಿವೇಕ್ ವಿಹಾರ್ ಪ್ರದೇಶದಲ್ಲಿ ಶನಿವಾರ ತಡರಾತ್ರಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಲ್ಲಿನ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿಗೆ ನಾಲ್ವರು ಮೃತಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಮುಂದುವರಿಸಿದ್ದಾರೆ.
ವಿವೇಕ್ ವಿಹಾರ್ನ ಜನವಸತಿ ಪ್ರದೇಶದಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ಬೆಂಕಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ದಟ್ಟವಾದ ಹೊಗೆ ಆವರಿಸಿಕೊಂಡಿದ್ದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಯಿತು.
ಈ ದುರ್ಘಟನೆಯಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮೃತಪಟ್ಟವರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ಸುಮಾರು 10ಕ್ಕೂ ಹೆಚ್ಚು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡಿವೆ. ಕಟ್ಟಡದೊಳಗೆ ಇನ್ನೂ ಕೆಲವರು ಸಿಲುಕಿರುವ ಸಾಧ್ಯತೆಯಿದ್ದು, ಅವರನ್ನು ರಕ್ಷಿಸಲು ಪ್ರಯತ್ನಿಸಲಾಗುತ್ತಿದೆ.ಹೊಗೆಯಿಂದಾಗಿ ಉಸಿರಾಟದ ತೊಂದರೆ ಅನುಭವಿಸಿದವರನ್ನು ಮತ್ತು ಸುಟ್ಟ ಗಾಯಗಳಾದವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.








