ಚಾಮರಾಜನಗರ : ರಾಜ್ಯದಲ್ಲಿ ಮತ್ತೊಂದು ಭೀಕರವಾದ ಅಪಘಾತ ಸಂಭವಿಸಿದ್ದು, ಮರಳು ತುಂಬಿದ್ದ ಲಾರಿ ಡಿಕ್ಕಿ ಹೊಡೆದು ಕಾರಿನಲ್ಲಿ ಇದ್ದ ಮೂವರು ಸ್ಥಳದಲ್ಲಿ ಸಾವನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮದ್ದಯ್ಯನಹುಂಡಿ ಗ್ರಾಮದ ಬಳಿ ಈ ಒಂದು ಅಪಘಾತ ಸಂಭವಿಸಿದೆ.
ಲಾರಿ ಡಿಕ್ಕಿಯಾಗಿ ಕಾರಿನಲ್ಲಿ ಇದ್ದ ಮೂವರು ಸಾವನ್ನಪ್ಪಿದ್ದು, ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಅಪಘಾತದಲ್ಲಿ ಮೂರುವರೆ ವರ್ಷದ ಮೋಹಿಜ್ ಝಜಾನ್, ಹಾಗೂ ಮುನಿರಾ (45) ಮತ್ತು ಕಾರು ಚಾಲಕ ಮುನೀರ್ (30) ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಇನ್ನುಳಿದ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ. ಮರಳು ತುಂಬಿದ್ದ ಲಾರಿಯು ಅತಿ ವೇಗವಾಗಿ ಬಂದು ಕಾರಿಗೆ ಡಿಕ್ಕಿ ಹೊಡೆದಿದ್ದೇ ಈ ಅವಘಡಕ್ಕೆ ಪ್ರಮುಖ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನುಜ್ಜುಗುಜ್ಜಾಗಿದ್ದ ಕಾರಿನಿಂದ ಮೃತದೇಹಗಳನ್ನು ಹೊರತೆಗೆಯಲು ಹರಸಾಹಸ ಪಡಬೇಕಾಯಿತು. ಸದ್ಯ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿರುವ ಲಾರಿ ಚಾಲಕನ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.








