ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಾಗೂ ಅಂಡಮಾನ್ ನಿಕೋಬಾರ್ ದ್ವೀಪಸಮೂಹದಲ್ಲಿ ಕಂಡುಬಂದಿರುವ ತೇವಾಂಶ ಭರಿತ ಮೋಡಗಳ ಪ್ರಭಾವದಿಂದಾಗಿ, ಕರ್ನಾಟಕ ರಾಜ್ಯದಾದ್ಯಂತ ಈ ವಾರ ಪೂರ್ತಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಮತ್ತು ಉತ್ತರ ಕರ್ನಾಟಕದ ಭಾಗಗಳಿಗೆ ಹೋಲಿಸಿದರೆ, ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ತುಸು ಹೆಚ್ಚಾಗಿರಲಿದೆ. ಕೊಡಗು, ಹಾಸನ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೇ 8 ರಿಂದ ಮೇ 12 ರವರೆಗೆ ಮಳೆ ಸುರಿಯಲಿದೆ. ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಮೇ 7 ರಿಂದ ಮೇ 10 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಮಳೆಯ ಸಂದರ್ಭದಲ್ಲಿ ಕೆಲವು ಜಿಲ್ಲೆಗಳಲ್ಲಿ ಗಾಳಿಯ ವೇಗ ಹೆಚ್ಚಿರಲಿದ್ದು, ಗುಡುಗು ಮತ್ತು ಮಿಂಚಿನ ಆರ್ಭಟವೂ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈಗಾಗಲೇ ಮಂಗಳವಾರ ಬೆಂಗಳೂರು ನಗರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಮಲೆನಾಡು ಭಾಗದ ಜಿಲ್ಲೆಗಳಾದ ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿಯೂ ಮಳೆಯ ಮುನ್ಸೂಚನೆ ನೀಡಲಾಗಿದೆ.








