ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳ ಕಾಲ (ಮೇ 9 ಮತ್ತು 10) ಮಳೆ ಅಬ್ಬರಿಸಲಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದ ಗಾಳಿಯೊಂದಿಗೆ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಗೂ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.
ಧಾರವಾಡ, ಹಾವೇರಿ, ಗದಗ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗಂಟೆಗೆ 40-50 ಕಿ.ಮೀ ವೇಗದ ಬಿರುಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ. ಆದರೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಶುಷ್ಕ ವಾತಾವರಣ ಮುಂದುವರಿಯಲಿದೆ. ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮೋಡಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಬೆಂಗಳೂರಿನ ಜೊತೆಗೆ ಮೈಸೂರು, ಬಳ್ಳಾರಿ, ಹಾಸನ, ಚಾಮರಾಜನಗರ ಹಾಗೂ ದಾವಣಗೆರೆ ಜಿಲ್ಲೆಗಳಲ್ಲೂ ಮಳೆಯ ಸಿಂಚನವಾಗಲಿದೆ.








