ಬೆಂಗಳೂರು: ರಾಜ್ಯದ ಜನತೆಗೆ ಹವಾಮಾನ ಇಲಾಖೆಯು ಮಳೆಯ ಮುನ್ಸೂಚನೆಯನ್ನು ನೀಡಿದೆ. ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಮತ್ತು ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇದೆ.
ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳ ಕಾಲ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿರಲಿದೆ. ಕರಾವಳಿಯ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಇದರೊಂದಿಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಉತ್ತರ ಒಳನಾಡಿನ ಧಾರವಾಡ, ಹಾವೇರಿ, ಗದಗ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಗಾಳಿಯ ವೇಗ ಗಂಟೆಗೆ 40 ರಿಂದ 50 ಕಿಲೋಮೀಟರ್ ತಲುಪುವ ಸಾಧ್ಯತೆಯಿದೆ.
ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಉಳಿದಂತೆ ಮೈಸೂರು, ಬಳ್ಳಾರಿ, ಹಾಸನ, ಚಾಮರಾಜನಗರ ಮತ್ತು ದಾವಣಗೆರೆ ಜಿಲ್ಲೆಗಳಲ್ಲೂ ಗುಡುಗು ಸಹಿತ ಮಳೆಯಾಗುವ ಲಕ್ಷಣಗಳಿವೆ. ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷವಾಗಿ ಇಂದು ಮತ್ತು ನಾಳೆ ಭಾರೀ ಮಳೆಯ ಮುನ್ಸೂಚನೆ ಇದ್ದು, ಸುಮಾರು 64.5 ಮಿಲಿ ಮೀಟರ್ನಿಂದ 115.5 ಮಿಲಿ ಮೀಟರ್ವರೆಗೆ ಮಳೆಯಾಗಬಹುದು ಎಂದು ಅಂದಾಜಿಸಲಾಗಿದೆ.
ಈ ಹವಾಮಾನ ಬದಲಾವಣೆಯ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ತನ್ನ ಅಧಿಕೃತ ಸಾಮಾಜಿಕ ಜಾಲತಾಣದ ಮೂಲಕ ಸಾರ್ವಜನಿಕರಿಗೆ ಎಚ್ಚರಿಕೆ ನೀಡಿದೆ. ಮಳೆ ಮತ್ತು ಗಾಳಿಯ ಸಂದರ್ಭದಲ್ಲಿ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪ್ರಾಧಿಕಾರ ಸೂಚಿಸಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸದ್ಯಕ್ಕೆ ಶುಷ್ಕ ವಾತಾವರಣ ಮುಂದುವರಿಯಲಿದೆ ಎಂದು ಇಲಾಖೆಯ ವರದಿ ತಿಳಿಸಿದೆ.








