ನವದೆಹಲಿ: ಮನೆಯೊಳಗೆ ಅಥವಾ ಸಾರ್ವಜನಿಕವಲ್ಲದ ಖಾಸಗಿ ಸ್ಥಳಗಳಲ್ಲಿ ಬಳಸುವ ಜಾತಿ ನಿಂದನೆ ಪದಗಳು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಅಪರಾಧವಾಗುವುದಿಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.
ಈ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ಪೀಠವು, ವ್ಯಕ್ತಿಯೊಬ್ಬನ ವಿರುದ್ಧ ದಾಖಲಾಗಿದ್ದ ಅಟ್ರಾಸಿಟಿ ಪ್ರಕರಣವನ್ನು ರದ್ದುಗೊಳಿಸಿದೆ.
ಎಸ್ಸಿ/ಎಸ್ಟಿ ಕಾಯ್ದೆಯ ಸೆಕ್ಷನ್ 3(1)(ಆರ್) ಮತ್ತು ಸೆಕ್ಷನ್ 3(1)(ಎಸ್) ಅಡಿಯಲ್ಲಿ ಅಪರಾಧವೆಂದು ಪರಿಗಣಿಸಲು, ಘಟನೆ ಸಂಭವಿಸಿದ ಸ್ಥಳವು ಸಾರ್ವಜನಿಕ ವೀಕ್ಷಣೆಗೆ ಲಭ್ಯವಿರಬೇಕು.ಜಾತಿ ಆಧಾರಿತ ನಿಂದನೆ ಅಥವಾ ನಡವಳಿಕೆಯು ಸಾರ್ವಜನಿಕರು ಇರುವ ಸ್ಥಳದಲ್ಲಿ ನಡೆದಿದ್ದರೆ ಮಾತ್ರ ಅದು ಈ ಕಾಯ್ದೆಯಡಿ ಅಪರಾಧವಾಗುತ್ತದೆ.
ಪ್ರಸ್ತುತ ಪ್ರಕರಣದಲ್ಲಿ ಎಸ್ಸಿ/ಎಸ್ಟಿ ಕಾಯ್ದೆಯ ದುರುಪಯೋಗವಾಗಿದೆ ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ. ಖಾಸಗಿ ಸ್ಥಳಗಳಲ್ಲಿ ನಡೆಯುವ ಇಂತಹ ಘಟನೆಗಳು ಅಟ್ರಾಸಿಟಿ ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸುವ ಮೂಲಕ ಸುಪ್ರೀಂಕೋರ್ಟ್ ಈ ಮಹತ್ವದ ತೀರ್ಪು ನೀಡಿದೆ.








