ಚಿಕ್ಕಮಗಳೂರು : ರಾಜ್ಯದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿಯಾಗಿದ್ದು, ಪೊಲೀಸ್ ಕಾನ್ಸ್ಟೇಬಲ್ವೊಬ್ಬರು ಕರ್ತವ್ಯದಲ್ಲಿರುವಾಗಲೇ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಸತೀಶ್ (53) ಅಕಾಲಿಕ ನಿಧನ ಹೊಂದಿದವರು ಎಂದು ತಿಳಿದುಬಂದಿದೆ.
ಮಂಗಳವಾರ ತಡರಾತ್ರಿ ರಾತ್ರಿ 112 ತುರ್ತು ಸೇವಾ ವಾಹನದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೇಳೆ ಸತೀಶ್ ಅವರಿಗೆ ಹಠಾತ್ ಎದೆನೋವು ಕಾಣಿಸಿಕೊಂಡಿದೆ. ಇತರ ಸಿಬ್ಬಂದಿ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೂಲತಃ ಶೃಂಗೇರಿ ತಾಲೂಕಿನ ಕಿಗ್ಗಾ ಗ್ರಾಮದವರಾದ ಇವರು, ಈ ಹಿಂದೆ ಭಾರತೀಯ ಸೇನೆಯಲ್ಲಿಯೂ 17 ವರ್ಷಗಳ ಕಾಲ ದೇಶ ಸೇವೆ ಸಲ್ಲಿಸಿದ್ದರು.
ಸೇನೆಯಿಂದ ನಿವೃತ್ತರಾದ ಬಳಿಕ ಕಳೆದ 10 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಸದ್ಯ ಹರಿಹರಪುರದಲ್ಲಿ ವಾಸವಿದ್ದ ಇವರ ಅಕಾಲಿಕ ನಿಧನಕ್ಕೆ ಪೊಲೀಸ್ ಇಲಾಖೆಯವರು ಹಾಗೂ ಸಾರ್ವಜನಿಕರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತದೇಹವನ್ನು ಕೊಪ್ಪದ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರು ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಿದ್ದಾರೆ.








