ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಹಿನ್ನಡೆಯಾಗಿದೆ. ತಮಗೆ ಜಾಮೀನು ಮಂಜೂರು ಮಾಡುವಂತೆ ಕೋರಿ ದರ್ಶನ್ ಸಲ್ಲಿಸಿದ್ದ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದ ಸರ್ವೋಚ್ಚ ನ್ಯಾಯಾಲಯವು, ಜಾಮೀನು ನೀಡಲು ಸ್ಪಷ್ಟವಾಗಿ ನಿರಾಕರಿಸಿದೆ. ಈ ಆದೇಶವು ನಟ ದರ್ಶನ್ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ನಿರಾಶೆ ಮೂಡಿಸಿದೆ.
ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಸದ್ಯಕ್ಕೆ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಅಷ್ಟೇ ಅಲ್ಲದೆ, ಮುಂದಿನ ಒಂದು ವರ್ಷದ ಅವಧಿಯೊಳಗೆ ಈ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳ ವಿಚಾರಣೆಯನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ನ್ಯಾಯಾಲಯ ಹಾಗೂ ತನಿಖಾ ಸಂಸ್ಥೆಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಆದೇಶದ ಹಿನ್ನೆಲೆಯಲ್ಲಿ ನಟ ದರ್ಶನ್ ಕನಿಷ್ಠ ಇನ್ನೂ ಒಂದು ವರ್ಷಗಳ ಕಾಲ ಜೈಲಿನಲ್ಲೇ ದಿನ ದೂಡುವುದು ಅನಿವಾರ್ಯವಾಗಿದೆ.
ಸುಪ್ರೀಂ ಕೋರ್ಟ್‌ನ ಈ ಮಹತ್ವದ ಆದೇಶ ಹೊರಬೀಳುತ್ತಿದ್ದಂತೆ, ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಸಂಪೂರ್ಣವಾಗಿ ಮೌನಕ್ಕೆ ಶರಣಾಗಿದ್ದಾರೆ ಎನ್ನಲಾಗಿದೆ. ಕೋರ್ಟ್ ತೀರ್ಪಿನ ವಿವರಗಳು ಜೈಲಿನ ಅಧಿಕಾರಿಗಳ ಮೂಲಕ ದರ್ಶನ್ ಅವರಿಗೆ ತಲುಪುತ್ತಿದ್ದಂತೆ, ಅವರು ತೀವ್ರ ನಿರಾಶೆ ಮತ್ತು ಆಘಾತಕ್ಕೆ ಒಳಗಾಗಿದ್ದಾರೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಸದ್ಯ ಪರಪ್ಪನ ಅಗ್ರಹಾರ ಜೈಲಿನ ಕ್ವಾರಂಟೈನ್ ಬ್ಯಾರಕ್‌ನಲ್ಲಿರುವ ನಟ ದರ್ಶನ್, ಆದೇಶದ ಬಳಿಕ ಯಾರೊಂದಿಗೂ ಮಾತನಾಡದೆ ಏಕಾಂಗಿಯಾಗಿ ಕುಳಿತಿದ್ದಾರೆ. ಕಾರಾಗೃಹದ ಇತರೆ ಕೈದಿಗಳು ಅಥವಾ ಸಿಬ್ಬಂದಿಯೊಂದಿಗೆ ಸಂವಹನ ನಡೆಸದೆ, ತೀವ್ರ ಆಲೋಚನೆಯಲ್ಲಿ ಮುಳುಗಿದ್ದಾರೆ. ಕಾನೂನು ಹೋರಾಟದಲ್ಲಿ ಜಾಮೀನು ಸಿಗಬಹುದು ಎಂಬ ದೊಡ್ಡ ನಿರೀಕ್ಷೆಯಲ್ಲಿದ್ದ ನಟನಿಗೆ ಸುಪ್ರೀಂ ಕೋರ್ಟ್ ತೀರ್ಪು ಭಾರಿ ಆಘಾತ ನೀಡಿದಂತಾಗಿದೆ.








