ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಬೆಲೆ ಏರಿಕೆಯ ಬಿಸಿ ಒಂದರ ಮೇಲೊಂದರಂತೆ ತಟ್ಟುತ್ತಲೇ ಇದೆ. ಇತ್ತೀಚೆಗಷ್ಟೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆಯಿಂದ ಕಂಗಾಲಾಗಿದ್ದ ಜನಸಾಮಾನ್ಯರಿಗೆ ಈಗ ಮತ್ತೊಂದು ಭಾರಿ ಆಘಾತ ಎದುರಾಗಿದೆ. ಇಂಧನ ದರ ಏರಿಕೆಯನ್ನು ಮುಂದಿಟ್ಟುಕೊಂಡು ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ದಿಢೀರ್ ಆಗಿ ಹೆಚ್ಚಳ ಮಾಡಿದ್ದಾರೆ.
ಕೇಂದ್ರ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ ಬೆನ್ನಲ್ಲೇ ಈ ನಿರ್ಧಾರ ಹೊರಬಿದ್ದಿದೆ. ನಿನ್ನೆ ಮಧ್ಯರಾತ್ರಿಯಿಂದಲೇ ಜಾರಿಗೆ ಬರುವಂತೆ ಖಾಸಗಿ ಬಸ್ಗಳ ಪ್ರಯಾಣ ದರವನ್ನು ಹೆಚ್ಚಿಸಲಾಗಿದೆ. ಇದರಿಂದಾಗಿ ದೂರದ ಊರುಗಳಿಗೆ ಪ್ರಯಾಣಿಸುವ ಸಾರ್ವಜನಿಕರು ತಕ್ಷಣವೇ ಜೇಬಿಗೆ ಕತ್ತರಿ ಬೀಳುವಂತಾಗಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ದರ ಏರಿಕೆ ಕುರಿತು ಖಾಸಗಿ ಬಸ್ ಮಾಲೀಕರ ಸಂಘದ ಅಧ್ಯಕ್ಷ ನಟರಾಜ್ ಶರ್ಮ ಅವರು ಅಧಿಕೃತ ಮಾಹಿತಿ ನೀಡಿದ್ದಾರೆ. ಇಂಧನ ಬೆಲೆಗಳು ಗಗನಕ್ಕೇರುತ್ತಿರುವುದರಿಂದ ಬಸ್ ನಿರ್ವಹಣಾ ವೆಚ್ಚ ಭರಿಸಲು ಸಾಧ್ಯವಾಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಅನಿವಾರ್ಯವಾಗಿ ಶೇಕಡಾ 20 ರಿಂದ 30 ರಷ್ಟು ಪ್ರಯಾಣ ದರವನ್ನು ಹೆಚ್ಚಳ ಮಾಡಬೇಕಾಗಿ ಬಂದಿದೆ ಎಂದು ಅವರು ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ಹಠಾತ್ ಆಗಿ ಜಾರಿಗೆ ಬಂದಿರುವ ಈ ದರ ಹೆಚ್ಚಳದಿಂದಾಗಿ ವೀಕೆಂಡ್ನಲ್ಲಿ ಊರುಗಳಿಗೆ ಹೊರಟಿದ್ದ ಪ್ರಯಾಣಿಕರು ಮತ್ತು ನಿತ್ಯ ಖಾಸಗಿ ಬಸ್ಗಳನ್ನೇ ಅವಲಂಬಿಸಿರುವ ಉದ್ಯೋಗಿಗಳು ತೀವ್ರ ತೊಂದರೆಗೆ ಸಿಲುಕಿದ್ದಾರೆ. ಮುಂಗಡ ಬುಕಿಂಗ್ ಮಾಡಿಕೊಂಡಿದ್ದವರಿಗೂ ಇದು ಹೆಚ್ಚುವರಿ ಹೊರೆಯಾಗಿ ಪರಿಣಮಿಸಿದೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನರಿಗೆ, ಸಾರಿಗೆ ವೆಚ್ಚದ ಈ ದಿಢೀರ್ ಏರಿಕೆ ಗಾಯದ ಮೇಲೆ ಉಪ್ಪು ಸವರಿದಂತಾಗಿದೆ.








