ನವದೆಹಲಿ:ಚೀನಾದ ಕಲ್ಲಿದ್ದಲು ಗಣಿಯೊಂದರಲ್ಲಿ ಸಂಭವಿಸಿದ ಭೀಕರ ಸ್ಫೋಟದಲ್ಲಿ ಕನಿಷ್ಠ 90 ಕಾರ್ಮಿಕರು ಸಾವನ್ನಪ್ಪಿರುವ ಘಟನೆಗೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ತೀವ್ರ ಆಘಾತ ಮತ್ತು ಸಂತಾಪ ವ್ಯಕ್ತಪಡಿಸಿದ್ದಾರೆ.
ಟ್ವಿಟರ್ (X) ಮೂಲಕ ತಮ್ಮ ಸಂದೇಶ ಹಂಚಿಕೊಂಡಿರುವ ಪ್ರಧಾನಿ ಮೋದಿ, “ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಸ್ಫೋಟದ ದುರಂತದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಈ ಅಪಘಾತದಲ್ಲಿ ಪ್ರಾಣ ಕಳೆದುಕೊಂಡವರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪಗಳು. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ” ಎಂದು ತಿಳಿಸಿದ್ದಾರೆ.
ಚೀನಾದ ಪ್ರಮುಖ ಕಲ್ಲಿದ್ದಲು ಗಣಿಯೊಂದರಲ್ಲಿ ಈ ಭೀಕರ ಸ್ಫೋಟ ಸಂಭವಿಸಿದೆ. ಪ್ರಾಥಮಿಕ ವರದಿಗಳ ಪ್ರಕಾರ, ಗಣಿಯ ಒಳಗಡೆ ಅನಿಲ ಸೋರಿಕೆಯಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಸ್ಫೋಟದ ತೀವ್ರತೆಗೆ ಗಣಿಯ ಬಹುಭಾಗ ಕುಸಿದು ಬಿದ್ದಿದ್ದು, ಬರೋಬ್ಬರಿ 90 ಕಾರ್ಮಿಕರು ಜೀವಂತವಾಗಿ ಸಮಾಧಿಯಾಗಿದ್ದಾರೆ ಎಂದು ವರದಿಯಾಗಿದೆ.
ಘಟನೆ ನಡೆದ ತಕ್ಷಣವೇ ಸ್ಥಳೀಯ ಆಡಳಿತ ಮತ್ತು ರಕ್ಷಣಾ ಪಡೆಗಳು ಜಂಟಿಯಾಗಿ ಕಾರ್ಯಪ್ರವೃತ್ತವಾಗಿವೆ. ಗಣಿಯ ಅವಶೇಷಗಳ ಅಡಿಯಲ್ಲಿ ಇನ್ನೂ ಹಲವು ಕಾರ್ಮಿಕರು ಸಿಲುಕಿರುವ ಆತಂಕವಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಚೀನಾ ಮಾಧ್ಯಮಗಳು ವರದಿ ಮಾಡಿವೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.








